ಮೈಸೂರು: ‘ಶಾಲೆಗಳಲ್ಲಿ ಬೆಳಿಗ್ಗೆ ಬಿಸಿ ಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ತಯಾರಿಸಿ ವಿದ್ಯಾರ್ಥಿಗಳಿಗೆ ಬಡಿಸುವಾಗ ಅಡುಗೆ ಸಿಬ್ಬಂದಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಬಗ್ಗೆ ಶಿಕ್ಷಕ ವೃಂದ ಸೂಕ್ತ ತಿಳಿವಳಿಕೆ ಕೊಡುತ್ತಿರಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ. ಸತೀಶ್ ಜವರೇಗೌಡ ಸಲಹೆ ನೀಡಿದರು.
ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ಅಡಿಯಲ್ಲಿ ಮೆಲ್ಲಹಳ್ಳಿ ಕ್ಲಸ್ಟರ್‌ನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಗೆ ಶನಿವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು ಮಾತನಾಡಿದರು.
‘ವಿದ್ಯಾರ್ಥಿಗಳ ಉತ್ತಮ ದೈಹಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ತುಂಬಾ ಅಗತ್ಯ. ಇದನ್ನು ಸಿದ್ಧಪಡಿಸಿ ಬಡಿಸುವಾಗ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ವಹಿಸಬೇಕು’ ಎಂದರು.
ಮೆಲ್ಲಹಳ್ಳಿ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಎಸ್. ದೀಪು ಹಾಗೂ ವಾಜಮಂಗಲ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಎಂ.ಎನ್. ಗಿರೀಶ್ ಕುಮಾರ್ ತರಬೇತಿ ನೀಡಿದರು. ಮೆಲ್ಲಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಪಿ.ಎನ್. ವೀಣಾ, ವರಕೋಡು ಶಾಲೆಯ ಮುಖ್ಯ ಶಿಕ್ಷಕ ಟಿ.ಆರ್. ಶಿವು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.