ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಯ ಸದಸ್ಯರು ಇಲ್ಲಿನ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹಳೆಯ ಟಯರ್ ಹಾಗೂ ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಶನಿವಾರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅರೆಬೆತ್ತಲಾಗಿ ಪ್ರತಿಭಟಿಸಿದರು. ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.
ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ‘ರಾಜ್ಯಪಾಲರು ಕಾನೂನು ಬಾಹಿರವಾಗಿ ಕ್ರಮ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೇವಕನಂತೆ ಕೆಲಸ ಮಾಡುತ್ತಿದ್ದಾರೆ. ಅವರ ನಡೆ ಖಂಡಿಸಿ ಮಂಗಳವಾರ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದೇವೆ’ ಎಂದು ತಿಳಿಸಿದರು.