ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂ.ಬಿ. ಪಾಟೀಲ ಸಾರ್ವಜನಿಕವಾಗಿ ಕ್ಷಮೆಯಾಚಿಸಲಿ: ಮಹೇಶ್ ಒತ್ತಾಯ

Published : 31 ಆಗಸ್ಟ್ 2024, 14:25 IST
Last Updated : 31 ಆಗಸ್ಟ್ 2024, 14:25 IST
ಫಾಲೋ ಮಾಡಿ
Comments

ಮೈಸೂರು: ‘ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಹಗುರವಾಗಿ ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎನ್. ಮಹೇಶ್ ಒತ್ತಾಯಿಸಿದರು.

ಇಲ್ಲಿ ‍ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸಚಿವರು ಪಾಳೇಗಾರಿಕೆ ಮನಸ್ಥಿತಿಯಲ್ಲಿ ಹೇಳಿಕೆ ನೀಡಿರುವುದು ಖಂಡನೀಯ. ಶೆಡ್ ಗಿರಾಕಿ ಎಂದೆಲ್ಲಾ ಟೀಕಿಸಿದ್ದಾರೆ. ಇದನ್ನೆಲ್ಲ ಸಹಿಸಿಕೊಂಡು ಕೂರುವುದಕ್ಕೆ ಆಗುವುದಿಲ್ಲ’ ಎಂದು ಹೇಳಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ರಾಜ್ಯದಲ್ಲಿ ಸಚಿವರೂ ಆದ ಪ್ರಿಯಾಂಕ್‌ ಖರ್ಗೆ ಅವರ ಪುತ್ರನ ಹೆಸರಿನಲ್ಲಿರುವ ಟ್ರಸ್ಟ್‌ಗೆ ನಿವೇಶನ ಮಂಜೂರು ಮಾಡಿರುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಉಳಿದ ಅರ್ಜಿಗಳನ್ನು ಬದಿಗಿಟ್ಟು ತರಾತುರಿಯಲ್ಲಿ ಸಚಿವರಿಗೆ ಕೆಲಸ ಮಾಡಿಕೊಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದರು.

‘ಅನುಮಾನಕ್ಕೆ ಸಮಜಾಯಿಷಿ ನೀಡುವ ಬದಲು ಕಾಂಗ್ರೆಸ್ ನಾಯಕರು ವಿಷಯಾಂತರ ಮಾಡಲು ಮುಂದಾಗಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ತಂದಿದ್ದ ಕಾನೂನಿಗೆ ತಿದ್ದುಪಡಿ ಮಾಡಿ ಹೊಸ ಕಾನೂನು ರಚಿಸಿ ಹಂಚಿಕೆ ಮಾಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರ ಟ್ರಸ್ಟ್‌ಗೆ ಹಂಚಿಕೆ ಮಾಡಿರುವ ಪ್ರಕರಣ ಕಾನೂನುಬಾಹಿರವಾಗಿದೆ’ ಎಂದು ದೂರಿದರು.

‘ಕೈಗಾರಿಕಾ ನಿವೇಶನಕ್ಕಾಗಿ 282 ಅರ್ಜಿಗಳು ಸಲ್ಲಿಕೆಯಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ಪರಿಶೀಲನೆ ಮಾಡದೆ ಐದಾರು ಅರ್ಜಿಗಳನ್ನು ಮಾತ್ರ ಪರಿಶೀಲಿಸಿ ಮಂಜೂರು ಮಾಡಿರುವುದರಿಂದ ಅನುಮಾನ ವ್ಯಕ್ತಪಡಿಸಿ, ಪುನರ್ ಪರಿಶೀಲನೆಗೆ ಕೋರಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದಕ್ಕಾಗಿ ಅವರನ್ನು ಹೀಯಾಳಿಸುವುದು ಸರಿಯಲ್ಲ’ ಎಂದು ಹೇಳಿದರು.

‘ಛಲವಾದಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರನ್ನು ಸಚಿವ ಪಾಟೀಲ ನಿಂದಿಸಿದ್ದಾರೆ. ಇದು ಅವರ ಯಜಮಾನಿಕೆ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ಆಕ್ರೋಶ ವ್ಯಕ್ತ‍ಪಡಿಸಿದರು.

ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಪರಮಾನಂದ, ಗ್ರಾಮಾಂತರ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಅನಿಲ್, ನಗರ ಅಧ್ಯಕ್ಷ ವಿ.ಶೈಲೇಂದ್ರ, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮರಿಯಪ್ಪ, ಮಾಧ್ಯಮ ಸಂಚಾಲಕ ಮಹೇಶ್‌ರಾಜೇ ಅರಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT