ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಮೈತ್ರಿ ಹೋರಾಟ: ನಿಖಿಲ್ ಕುಮಾರಸ್ವಾಮಿ

Published 2 ಆಗಸ್ಟ್ 2024, 13:58 IST
Last Updated 2 ಆಗಸ್ಟ್ 2024, 13:58 IST
ಅಕ್ಷರ ಗಾತ್ರ

ಮೈಸೂರು: ‘ಮೈಸೂರು ಚಲೋ ಪಾದಯಾತ್ರೆಯ ವಿಚಾರದಲ್ಲಿ ಬಿಜೆಪಿ–ಜೆಡಿಎಸ್‌ ನಡುವೆ ಯಾವುದೇ ಬಿರುಕು ಉಂಟಾಗಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಮೈತ್ರಿ ಹೋರಾಟ ನಿರಂತರವಾಗಿ ನಡೆಯುತ್ತದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಆಷಾಢದ ಕಡೆಯ ಶುಕ್ರವಾರದ ಅಂಗವಾಗಿ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅವರು ಮಾತನಾಡಿದರು.

‘ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಪಾದಯಾತ್ರೆಯ ಉದ್ದೇಶವಾಗಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದರಿಂದಾಗಿ ಪಾದಯಾತ್ರೆ ಮುಂದೂಡಲು ಮನವಿ ಮಾಡಲಾಗಿತ್ತಷ್ಟೆ. ಆದರೆ, ಬಿಜೆಪಿ ವರಿಷ್ಠರು ಮುಂದೂಡುವುದು ಸರಿಯಲ್ಲವೆಂದು ಹೇಳಿದ ಕಾರಣ ಪಾದಯಾತ್ರೆಗೆ ನಾವು ಒಪ್ಪಿದ್ದೇವೆ. ರಾಜ್ಯದ ಜನರ ಪರವಾಗಿ ನಡೆಸುತ್ತಿದ್ದೇವೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್‌ನವರು ಪರ್ಯಾಯ ಸಮಾವೇಶಗಳನ್ನು ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಇತಿಹಾಸದಲ್ಲೇ ಈ ರೀತಿಯ ಹಗರಣ ಯಾವತ್ತೂ ನಡೆದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ₹89 ಕೋಟಿ ಹಗರಣ ನಡೆದಿದೆ ಎಂದು ಸ್ವತಃ ಮುಖ್ಯಮಂತ್ರಿಯೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಸರ್ಕಾರವೇ ಹೊಣೆ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

ರಾಮನಗರದಲ್ಲಿ ಎಚ್‌ಡಿಕೆ ಆಸ್ತಿ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ರಾಮನಗರದಲ್ಲಿ ನಮ್ಮ ಆಸ್ತಿ ಎಷ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 1985ರಲ್ಲಿ ಕುಮಾರಸ್ವಾಮಿ ಅವರು ಕೇತಗಾನಹಳ್ಳಿ ಬಳಿ ಜಮೀನು ಖರೀದಿಸಿದ್ದರು. ಸಿನಿಮಾ ವಿತರಣೆಯಲ್ಲಿ ಬಂದಿದ್ದ ಹಣದಲ್ಲಿ ಜಮೀನು ಖರೀದಿಸಿದ್ದೇವೆ. ಇದನ್ನು ಹೊರತುಪಡಿಸಿ ರಾಮನಗರದಲ್ಲಿ ಬೇರಾವುದೇ ಆಸ್ತಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಮೈತ್ರಿಗೆ ಜನರ ಬೆಂಬಲ ಸಿಕ್ಕಿದೆ. ಅದೇ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ನಮಗೆ ಹೆಚ್ಚು ಸ್ಥಾನ ಸಿಕ್ಕಿದೆ. ಇದನ್ನು ಅರ್ಥ ಮಾಡಿಕೊಂಡರೆ ಸಾಕು’ ಎಂದರು.

ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮೈಮುಲ್‌ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ, ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ಮುಖಂಡ ಎಂ.ಜೆ. ರವಿಕುಮಾರ್ ಪಾಲ್ಗೊಂಡಿದ್ದರು.

ಕಳೆದ ವರ್ಷ ರೈತರು ಸಂಕಷ್ಟದಲ್ಲಿದ್ದರು. ಈ ಬಾರಿ ಉತ್ತಮ ಮಳೆಯಾಗಿದ್ದು ಸಮೃದ್ಧಿ ದೊರೆಯಲೆಂದು ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿದ್ದೇನೆ
ನಿಖಿಲ್ ಕುಮಾರಸ್ವಾಮಿ ಅಧ್ಯಕ್ಷ ಜೆಡಿಎಸ್‌ ಯುವ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT