ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸೂಚನೆ

Published 19 ಫೆಬ್ರುವರಿ 2024, 13:03 IST
Last Updated 19 ಫೆಬ್ರುವರಿ 2024, 13:03 IST
ಅಕ್ಷರ ಗಾತ್ರ

ಮೈಸೂರು: ‘ಬೇಸಿಗೆ ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಬರ ಪರಿಸ್ಥಿತಿ ನಿರ್ವಹಣೆ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕುಡಿಯುವ ನೀರಿನ ಲಭ್ಯತೆ ಬಗ್ಗೆ ಮಾಹಿತಿ ಇಟ್ಟುಕೊಳ್ಳಬೇಕು. ಸಮಸ್ಯಾತ್ಮಕ ಪ್ರದೇಶಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ಪ್ರತಿ ಗ್ರಾಮಕ್ಕೆ ಕಡ್ಡಾಯವಾಗಿ ಒಂದೊಂದು ಖಾಸಗಿಯವರ ಜಾಗದಲ್ಲಿರುವ ಕೊಳವೆಬಾವಿಯನ್ನು ಬಾಡಿಗೆ ಪಡೆದುಕೊಳ್ಳಲು ಸಂಬಂಧಿಸಿದವರ ಜೊತೆ ಒಪ್ಪಂದ ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಮುಂದೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಆದ್ದರಿಂದ ಅಗತ್ಯವಿರುವಲ್ಲಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಟೆಂಡರ್ ಕರೆದು ವ್ಯವಸ್ಥೆ ಮಾಡಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ತಿಳಿಸಲು ಸಹಾಯವಾಣಿ ಆರಂಭಿಸಿ ಸಿಬ್ಬಂದಿ ನೇಮಿಸಿಕೊಳ್ಳಬೇಕು. ನೀರಿನ ಶುದ್ಧತೆ ಹಾಗೂ ಗುಣಮಟ್ಟದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು’ ಎಂದು ತಾಕೀತು ಮಾಡಿದರು.

‘ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು ಅಗತ್ಯವಿದ್ದಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಬರವನ್ನು ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಬೇಕು. ಬರ ಪರಿಹಾರದ ಹಣ ಅರ್ಹ ಫಲಾನುಭವಿಗಳೆಲ್ಲರಿಗೂ ತಲುಪಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು’ ಎಂದು ತಿಳಿಸಿದರು.

‘ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಮೇವು ಲಭ್ಯತೆ ಬಗ್ಗೆ ಮಾಹಿತಿ ಇರಬೇಕು. ಮೇವಿನ ಬೀಜದ ಕಿರು ಪೊಟ್ಟಣಗಳನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, ಅದು ಸದ್ಬಳಕೆ ಆಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು. ಕುಡಿಯುವ ನೀರು, ಜಾನುವಾರು ಮೇವು ಲಭ್ಯತೆ, ರಸಗೊಬ್ಬರ, ವಿದ್ಯುತ್ ಮೊದಲಾದ ವಿಷಯಗಳ ಕುರಿತು ಒಂದು ವಾರದೊಳಗೆ ತಾಲ್ಲೂಕುಗಳಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜ್, ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್‌ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT