ನಂಜನಗೂಡು: ‘ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಸರ್ಕಾರ ರಚಿಸುವುದು ನಿಶ್ಚಿತ ವಾಗಿದ್ದು, ಮಡಿವಾಳ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲಾಗು ವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ಕುಪ್ಪರವಳ್ಳಿಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಡಿವಾಳರ ಸಂಘ ಆಯೋಜಿಸಿದ್ದ ಮಡಿವಾಳರ ಜಾಗೃತ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮಡಿವಾಳ ಸಮುದಾಯದ ಯಾರಾದರೊಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗುವುದು. ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಮಡಿವಾಳ ಸಮುದಾಯದವರು ಮನವಿ ಮಾಡಿದ್ದಾರೆ. ಆದರೆ, ಯಾವುದೇ ಸಮುದಾಯವನ್ನು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರ್ಪಡೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ರಾಜ್ಯ ಮಡಿವಾಳ ಸಂಘದ ಗೌರವಾಧ್ಯಕ್ಷ ಕೆ.ಎಸ್.ರವಿಕುಮಾರ್ ಮಾತನಾಡಿ, ‘ಮಡಿವಾಳ ಜನಾಂಗ ದವರು ಪ್ರಗತಿ ಸಾಧಿಸುವ ಸಲುವಾಗಿ ಸಂಘಟಿತರಾಗಬೇಕು. ಮಡಿವಾಳ ಸಮುದಾಯವು ಆರ್ಥಿಕ ಹಾಗೂ ರಾಜಕೀಯವಾಗಿ ತೀರಾ ಹಿಂದುಳಿದಿದೆ. ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ, ಗೋಪಿಕೃಷ್ಣ, ಎಂ.ರಾಮಯ್ಯ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮುಖಂಡರಾದ ಎಸ್.ಸಿ.ಬಸವರಾಜು, ಅಮರನಾಥ್, ವರುಣಾ ಮಹದೇವು, ಕಿರಾಳು ಸಂತೋಷ್, ತಾಲ್ಲೂಕು ಮಡಿವಾಳರ ಸಂಘದ ಅಧ್ಯಕ್ಷ ಹೆಜ್ಜಿಗೆ ಪ್ರಸನ್ನಕುಮಾರ್, ತಿ.ನರಸೀಪುರ ತಾಲ್ಲೂಕು ಮಡಿವಾಳ ಸಂಘದ ಅಧ್ಯಕ್ಷ ಕುರುಬೂರು ಮಹದೇವಸ್ವಾಮಿ, ಜಯರಾಂ, ಶಿವಣ್ಣ, ಮಾದುರಾಜು, ಆಲಗೂಡು ಬಸವರಾಜು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.