ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಪಿಒಪಿ, ಬಣ್ಣ ಲೇಪಿತ ವಿಗ್ರಹ: ಕ್ರಮದ ಎಚ್ಚರಿಕೆ

Published : 25 ಆಗಸ್ಟ್ 2024, 5:12 IST
Last Updated : 25 ಆಗಸ್ಟ್ 2024, 5:12 IST
ಫಾಲೋ ಮಾಡಿ
Comments

ಮೈಸೂರು: ‘ಹಾನಿಕಾರಕ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಮತ್ತು ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಪರಿಸರ ಸ್ನೇಹಿ ಗಣೇಶ ಚತುರ್ಥಿ’ ಆಚರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳಿರುವ ಬಗ್ಗೆ ಮಾಹಿತಿ, ದೂರು ಸ್ವೀಕೃತವಾದರೆ ಅಧಿಕಾರಿಗಳು ಕ್ರಮ ಜರುಗಿಸಬೇಕು. ಪಿಒಪಿ ಎನ್ನುವುದು ಖಚಿತವಾದಲ್ಲಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದಂತೆ ನಿಯಮಾನುಸಾರ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ವಿಗ್ರಹ ತಯಾರಕರು, ಮಾರಾಟಗಾರರು ಮತ್ತು ಗಣಪತಿ ಪ್ರತಿಷ್ಠಾಪಿಸುವ ಸಂಘ–ಸಂಸ್ಥೆಗಳಿಗೆ ಅನುಮತಿ ನೀಡಲು ಪೋಲಿಸ್ ಇಲಾಖೆ, ನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡ ಏಕಗವಾಕ್ಷಿ ಸಮಿತಿ  ರಚಿಸಬೇಕು. ಸಮಿತಿಯು ಅರ್ಜಿಯನ್ನು 24 ಗಂಟೆಯೊಳಗೆ ವಿಲೇವಾರಿ ಮಾಡಬೇಕು’ ಎಂದು ನಿರ್ದೇಶನ ನೀಡಿದರು.

‘ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಷರತ್ತುಬದ್ಧ ಪ್ರಮಾಣಪತ್ರವನ್ನು ನೀಡಬೇಕು. ತಾಲ್ಲೂಕು ಮಟ್ಟದ ಕಾರ್ಯಪಡೆಯಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಸರ್ಕಲ್ ಇನ್‌ಸ್ಪೆಕ್ಟರ್‌ ಮತ್ತು ಪಿಡಿಒಗಳು ಕಾರ್ಯ ವ್ಯಾಪ್ತಿಯಲ್ಲಿ ಪಿಒಪಿ ವಿಗ್ರಹಗಳನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ಸೂಚಿಸಿದರು.

‘ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಉತ್ತೇಜಿಸಬೇಕು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕಗಳ ಬಳಕೆಯಾಗದಂತೆ ನೋಡಿಕೊಳ್ಳಬೇಕು. ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT