ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುನಿರತ್ನ ಗಡೀಪಾರಿಗೆ ಆಗ್ರಹ

ಕರ್ನಾಟಕ ಭೀಮ್ ಸೇನೆ, ಸಂಶೋಧಕರ ಸಂಘದಿಂದ ಧರಣಿ
Published : 21 ಸೆಪ್ಟೆಂಬರ್ 2024, 6:11 IST
Last Updated : 21 ಸೆಪ್ಟೆಂಬರ್ 2024, 6:11 IST
ಫಾಲೋ ಮಾಡಿ
Comments

ಮೈಸೂರು: ‘ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.

ಸೇನೆಯ ಜಿಲ್ಲಾಧ್ಯಕ್ಷ ಸರ್ವೇಶ್ ಮಾತನಾಡಿ, ‘ಶಾಸಕ ಮುನಿರತ್ನ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತನಾಡಿದ ಆಡಿಯೊ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದಲಿತ, ಒಕ್ಕಲಿಗ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಅಸಂವಿಧಾನಿಕ ಪದ ಬಳಸಿ, ಶಾಸಕ ಸ್ಥಾನಕ್ಕೆ ಚ್ಯುತಿ ಬರುವಂತೆ ನಡೆದುಕೊಂಡಿದ್ದಾರೆ’ ಎಂದು ದೂರಿದರು.

‘ಸಮಾಜವನ್ನು ತಿದ್ದಿ, ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕಾದ ಶಾಸಕರು, ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಮುನಿರತ್ನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ವಿಚಾರವನ್ನು ಸೂಕ್ಷ್ಮ ಹಾಗೂ ಗಂಭೀರವಾಗಿ ಪರಿಗಣಿಸಬೇಕು. ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ತೆರವು ಮಾಡಿ, ರಾಜ್ಯದಿಂದ ಗಡೀಪಾರು ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಶೋಧಕರ ಸಂಘದಿಂದ ಪ್ರತಿಭಟನೆ: ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದ ಸದಸ್ಯರು ಶುಕ್ರವಾರ ಅಂಬೇಡ್ಕರ್ ಮುಂಭಾಗ ಪ್ರತಿಭಟನೆ ನಡೆಸಿ, ‘ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಶಿವಶಂಕರ್ ಮಾತನಾಡಿ, ‘ದಲಿತರ ಮೇಲೆ ಇನ್ನೂ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದ್ದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮುನಿರತ್ನ ವರ್ತನೆ ಖಂಡನೀಯ. ಅವರು ದಲಿತರಿಂದ ಮತ ಪಡೆದು ಶಾಸಕರಾಗಿ ಅವರನ್ನೇ ಕೀಳಾಗಿ ಮಾತನಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ. ಜಾತಿನಿಂದನೆ ಮಾಡಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಕಾರ್ಯಾಧ್ಯಕ್ಷ ಕಲ್ಲಳ್ಳಿ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಲಿಂಗರಾಜು, ವರಹಳ್ಳಿ ಆನಂದ, ವಜ್ರಮುನಿ, ಜಗದೀಶ, ವಿಶ್ವ ಪ್ರಸಾದ್, ನವೀನ ಭಾಗವಹಿಸಿದ್ದರು.

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದ ಸದಸ್ಯರು ಅಂಬೇಡ್ಕರ್ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದ ಸದಸ್ಯರು ಅಂಬೇಡ್ಕರ್ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT