ನಂಜನಗೂಡು: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದ ಕ್ಷೌರದ ಅಂಗಡಿಯಲ್ಲಿ ಪರಿಶಿಷ್ಟ ಜಾತಿಯ ಯುವಕನ ಕೊಂದ ಪ್ರಕರಣವನ್ನು ಖಂಡಿಸಿ ನಗರದ ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯ ದೇವರಾಜ ಅರಸು ಸೇತುವೆ ಬಳಿ ಗುರುವಾರ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
ಘಟನೆ ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್ ಮಾತನಾಡಿ, ‘ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದಿವೆ. ಸಂವಿಧಾನ ಜಾರಿಯಾಗಿ 75 ವರ್ಷ ತುಂಬಿದೆ. ಹಾಗಿದ್ದರೂ, ಭಾರತದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ನಿಜಕ್ಕೂ ದುರಂತವೇ ಸರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಎಸ್‌ಸಿ, ಎಸ್‌ಟಿ ದೌರ್ಜನ್ಯ ವಿಶೇಷ ಕಾಯ್ದೆ ಜಾರಿಗೆ ತಂದ್ದಿದರೂ ಪ್ರತಿನಿತ್ಯ ದೌರ್ಜನ್ಯಗಳು ನಡೆಯುತ್ತಲೇ ಇವೆ. ಪರಿಶಿಷ್ಟ ಜಾತಿಯ ಯುವಕನನ್ನು ಜಾತಿಯ ಹೆಸರಿನಲ್ಲಿ ಕೊಲೆ ಮಾಡಿರುವುದು ಖಂಡನೀಯ. ಯಾವುದೇ ಸರ್ಕಾರಗಳು ಬಂದರೂ ಅಸ್ಪೃಶ್ಯತೆ ಮಾತ್ರ ಹಾಗೆ ಉಳಿದುಕೊಂಡಿದೆ. ಇಂತಹ ಕೃತ್ಯ ನಡೆದಾಗ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕು. ಈ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಕೂಡಲೇ ಗಡಿಪಾರು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆ ಮುಖಂಡರಾದ ಕಾರ್ಯ ಬಸವಣ್ಣ, ಅಭಿ ನಾಗಭೂಷಣ್, ಪ್ರಶಾಂತ್ ಜಯಶಂಕರ್, ಶಂಕರಪುರ ಸುರೇಶ್, ನಾರಾಯಣ್, ವಿಜಯ್ ಕುಮಾರ್, ಪುಟ್ಟಸ್ವಾಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.