ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಬಗ್ಗೆ ಯೋಚಿಸುವುದಿಲ್ಲ: ಸಿದ್ದರಾಮಯ್ಯ

Last Updated 2 ಏಪ್ರಿಲ್ 2023, 13:42 IST
ಅಕ್ಷರ ಗಾತ್ರ

ಮೈಸೂರು: ‘ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚಿಸುವುದಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಯಾರನ್ನು ಯಾರಿಂದಲೂ ಕಟ್ಟಿ ಹಾಕಲಾಗದು. ಯಾರನ್ನಾದರೂ ಸೋಲಿಸುವುದು ಅಥವಾ ಗೆಲ್ಲಿಸುವುದು ಜನರ ಕೈಲಿದೆ’ ಎಂದರು.

‘ನಾನು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಷ್ಟೆ ವರುಣಾ ಕ್ಷೇತ್ರಕ್ಕೆ ಹೋಗುತ್ತೇನೆ. ಡಾ.ಯತೀಂದ್ರ ಅಲ್ಲಿನ ಹಾಲಿ ಶಾಸಕ. ಅವರು ನನ್ನ ಪರವಾಗಿ ಕೆಲಸ ಮಾಡುತ್ತಾರೆ. ಯಾರು ಗೆದ್ದರೆ ಕ್ಷೇತ್ರ ಅಭಿವೃದ್ಧಿ ಮಾಡುತ್ತಾರೆ ಎಂಬುದನ್ನು ನಿರ್ಧರಿಸಬೇಕಾದವರು ಜನರು’ ಎಂದು ಪ್ರತಿಕ್ರಿಯಿಸಿದರು.

‘ಚಾಮರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ವಿಚಾರ ಏ.4ರಂದು ಇತ್ಯರ್ಥವಾಗಬಹುದು. ಅಂದು ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ. ಬಳಿಕ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ನಾನು ಕೋಲಾರದಿಂದ ಸ್ಪರ್ಧಿಸುವ ವಿಚಾರವನ್ನು ಹೈಕಮಾಂಡ್‌ ತೀರ್ಮಾನಿಸಲಿದೆ’ ಎಂದು ಹೇಳಿದರು.

‘ಸರ್ಕಾರ ತರಾತುರಿಯಲ್ಲಿ, ಅವೈಜ್ಞಾನಿಕವಾಗಿ ಮೀಸಲಾತಿ ಪರಿಷ್ಕರಿಸಿದೆ. ಅವರ ಉದ್ದೇಶ ಒಳ್ಳೆಯದಿಲ್ಲ. ಮೀಸಲಾತಿ ಕೊಡಬೇಕು ಎಂದಿದ್ದರೆ ಅದರ ಬಗ್ಗೆ ಅಧ್ಯಯನ ಮಾಡಿ ಸಂವಿಧಾನಬದ್ಧವಾಗಿ, ವೈಜ್ಞಾನಿಕವಾಗಿ ನೀಡುತ್ತಿದ್ದರು. ಒಳ ಮೀಸಲಾತಿ ವಿಚಾರವಾಗಿ ಸರ್ಕಾರ ನಾಲ್ಕು ವರ್ಷದಿಂದ ಸುಮ್ಮನಿದ್ದು ಚುನಾವಣೆ ಬಂದಾಗ ಮತಕ್ಕಾಗಿ ಜಾರಿಗೆ ಮುಂದಾಗಿದ್ದಾರೆ’ ಎಂದು ಆರೋ‍ಪಿಸಿದರು.

‘ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ, ಪರಿಶಿಷ್ಟ ವರ್ಗಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿದ್ದಾರೆ. ನ್ಯಾ.ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆಯಾದದ್ದು ಸಮ್ಮಿಶ್ರ ಸರ್ಕಾರ ಇದ್ದಾಗ. ವರದಿ ನೀಡಿದ್ದು 2020ರಲ್ಲಿ. ಸರ್ಕಾರ ತೀರ್ಮಾನಿಸಿರುವುದು 2023ರಲ್ಲಿ. ಈವರೆಗೆ ಸರ್ಕಾರ ಏನು ಮಾಡುತ್ತಿತ್ತು?’ ಎಂದು ಕೇಳಿದರು.

‘ಮೀಸಲಾತಿ ಹೆಚ್ಚಳ ಮಾಡಿದ ಮೇಲೆ ಒಟ್ಟು ಮೀಸಲಾತಿ ಪ್ರಮಾಣ ಶೇ 56 ಆಗಿದೆ. ಇದರಿಂದ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ‘ಮೀಸಲಾತಿ ಪ್ರಮಾಣ ಶೇ 50ರಷ್ಟು ಮೀರಬಾರದು’ ಎಂಬ ತೀರ್ಪಿನ ಉಲ್ಲಂಘನೆ ಆಗುತ್ತದೆ. ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಕೆಲಸವನ್ನು ಸರ್ಕಾರ ಮಾಡಿದೆಯಾ? ಹೀಗೆ ಪರಿಶಿಷ್ಟ ಜಾತಿ, ವರ್ಗದವರು ಮತ್ತು ಅಲ್ಪಸಂಖ್ಯಾತರಿಗೆ ಮೋಸ ಮಾಡಿದೆ’ ಎಂದು ಆರೋಪಿಸಿದರು.

‘ಹಿಂದೆಯೆಲ್ಲ ಮೀಸಲಾತಿ ಜಾರಿಯನ್ನು ಜೇನುಗೂಡಿಗೆ ಕೈಹಾಕಿ ಮಾಡಿದ್ದಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಹೊಸದಾಗಿ ಮೀಸಲಾತಿ ಜಾರಿ ಮಾಡಿದೆಯಾ? ಪ್ರವರ್ಗ–1, 2ಎ, 2ಬಿ, 3ಎ, 3ಬಿ ಇವುಗಳೆಲ್ಲ ಬೊಮ್ಮಾಯಿ ಸರ್ಕಾರದ ಕಾಲದಲ್ಲಿ ಮಾಡಿದ್ದಾ? ಹಿಂದೆಲ್ಲಾ ಮೀಸಲಾತಿ ನೀಡಿಲ್ಲವಾ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT