ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಗುಣಕ್ಕೆ ಕ್ರೀಡೆ ಸಹಕಾರಿ; ಪಾಟೀಲ್

Published 27 ಜುಲೈ 2023, 11:23 IST
Last Updated 27 ಜುಲೈ 2023, 11:23 IST
ಅಕ್ಷರ ಗಾತ್ರ

ಮಳವಳ್ಳಿ: ಪ್ರಸ್ತುತ ಸಂದರ್ಭದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಭವಿಷ್ಯದ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರ ಪಾಟೀಲ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ಆಯೋಜಿಸಿದ ಕಿರುಗಾವಲು ಹೋಬಳಿಮಟ್ಟದ 14 ವರ್ಷದೊಳಗಿನ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಬಾಲ್ಯದಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಹಾಗೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಲು ಇಂಥ ಕ್ರೀಡಾಕೂಟಗಳಿಂದ ಸಾಧ್ಯವಾಗುತ್ತದೆ. ದೇಶದ ಉತ್ತಮ ಕ್ರೀಡಾ ಪಟುಗಳನ್ನು ಗುರುತಿಸಲು ಇದೊಂದು ಉತ್ತಮ ವೇದಿಕೆಯಾಗಿದೆ’ ಎಂದು ತಿಳಿಸಿದರು.

‘ಕ್ರೀಡಾಪಟುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುತ್ತಿದೆ. ಹೀಗಾಗಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸ್ಥಳೀಯ ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಇಲ್ಲಿ ಗೆದ್ದಂತಹ ಮಕ್ಕಳಿಗೆ ಮುಂದಿನ ದಿನಗಳಲ್ಲಿ ತರಬೇತಿ, ಮಾರ್ಗದರ್ಶನ ನೀಡಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲೂ ಪ್ರಶಸ್ತಿ ಪಡೆಯುವಂತಾಗಲು ನೆರವಾಗುತ್ತದೆ’ ಎಂದು ತಿಳಿಸಿದರು.

‘ಮೈಸೂರು ಡಯಟ್ ಉಪನ್ಯಾಸಕ ಎಸ್.ಪಿ.ನಾಗರಾಜು ಮಾತನಾಡಿ, ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಹೀಗಾಗಿ ಮಕ್ಕಳು ಸ್ಪರ್ಧೆಯಲ್ಲಿ ಭಾಗಿಯಾಗಬೇಕು’ ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಸಿಆರ್‌ಪಿ ಸಿದ್ದರಾಜು, ಗ್ರಾ.ಪಂ.ಸದಸ್ಯರಾದ ಮಾದೇಗೌಡ, ಉಮೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಎಸ್.ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ಆರ್.ದಾಸೇಗೌಡ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ರವೀಂದ್ರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ, ಮುಖ್ಯ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದೇಗೌಡ, ಡಾ.ಎಲ್.ಶಿವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT