ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಜಿಲ್ಲೆ ಸುಧಾರಿಸಬೇಕು–‌ ಸಿಎಂ ಸಿದ್ದರಾಮಯ್ಯ

Published 10 ಮೇ 2024, 13:38 IST
Last Updated 10 ಮೇ 2024, 13:38 IST
ಅಕ್ಷರ ಗಾತ್ರ

ಮೈಸೂರು: ‘ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯು 5ನೇ ಸ್ಥಾನದೊಳಗೆ ಬರಬೇಕು ಎಂದು ಅಧಿಕಾರಿಗಳಿಗೆ ಗುರಿ ನೀಡಿದ್ದೆ. ಆದರೆ, ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸುಧಾರಿಸಿಕೊಳ್ಳಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು 1994ರಲ್ಲಿ ಹಣಕಾಸು ಸಚಿವನಾಗಿದ್ದಾಗ, ಸಾರಾಯಿ ಅಂಗಡಿ ಬೇಡ, ಹೆಂಡದಂಗಡಿ ಬೇಡ, ವಸತಿ ಶಾಲೆ ಬೇಕು ಎನ್ನುವುದು ದಸಂಸದವರ ಬೇಡಿಕೆ ಹಾಗೂ ಘೋಷಣೆಯಾಗಿತ್ತು. ನಾನು ಅವರ ಸಂಪರ್ಕದಲ್ಲಿ ಇದ್ದಿದ್ದರಿಂದ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದವನಾಗಿದ್ದರಿಂದ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಕಾರಣದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಯಿತು’ ಎಂದು ನೆನೆದರು.

‘ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಇಂದು ಬಹುತೇಕ ಪ್ರತಿ ಹೋಬಳಿಗೊಂದು ವಸತಿ ಶಾಲೆ ಇದೆ. 900ಕ್ಕೂ ಹೆಚ್ಚು ಇವೆ. ಅಂತಹ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. ಎಲ್ಲ ಮಕ್ಕಳೂ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಬೇಕು ಎನ್ನುವುದು ನನ್ನ ಆಶಯ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವ‍ಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್‌, ಮುಡಾ ಅಧ್ಯಕ್ಷ ಕೆ.ಮರೀಗೌಡ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ, ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯ್‌ಕುಮಾರ್‌ ಹಾಗೂ ನಗರ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT