ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್‌ಗೆ ಆಗ್ರಹ

ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ
Published 31 ಮೇ 2024, 6:19 IST
Last Updated 31 ಮೇ 2024, 6:19 IST
ಅಕ್ಷರ ಗಾತ್ರ

ಮೈಸೂರು: ‘ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

‘ಮುಂಗಾರು ಪೂರ್ವ ಮಳೆ ವೇಳೆ ಬೀಸಿದ ಬಿರುಗಾಳಿಗೆ ಬಾಳೆ ಬೆಳೆಗೆ ಹಾನಿಯಾಗಿದ್ದು, ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಈ ಬೆಳೆಗೆ ಎಕರೆಗೆ ₹1.50 ಲಕ್ಷಕ್ಕಿಂತ ಜಾಸ್ತಿ ಖರ್ಚಾಗುತ್ತದೆ. ನಷ್ಟಕ್ಕೆ ಒಳಗಾದವರನ್ನು ರಕ್ಷಿಸಲು ಸರ್ಕಾರ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಲಾಯಿತು.

‘ರಾಜ್ಯದಲ್ಲಿ 222 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಆದರೆ, ಬೆಳೆ ನಷ್ಟ ಅನುಭವಿಸಿದರೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಕೊಡುತ್ತಿಲ್ಲ. ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸಿಗುತ್ತಿದೆ. ಬದಲಿಗೆ, ನಷ್ಟ ಅನುಭವಿಸಿರುವ ಎಲ್ಲರಿಗೂ ಯಾವುದೇ ಷರತ್ತು ವಿಧಿಸದೆ, ತಾರತಮ್ಯ ಮಾಡದೆ ನೆರವಾಗಬೇಕು. ಪ್ರತಿ ಎಕರೆಗೆ ₹25 ಸಾವಿರ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಬೇಕು’ ಎಂದು ಆಗ್ರಹಿಸಲಾಯಿತು.

‘ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯಿಂದ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ, ರೈತರಿಂದ ಅಕ್ರಮವಾಗಿ ಹಣ ಕಡಿತ ಮಾಡಿರುವುದನ್ನು ವಾಪಸ್ ಕೊಡಿಸಬೇಕು. ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಸಬೇಕು. ಈ ಸಾಲಿಗೆ ಪ್ರತಿ ಟನ್ ಕಬ್ಬಿಗೆ ₹4ಸಾವಿರ ಮುಂಗಡ ಪಾವತಿ ಮಾಡಬೇಕು. ಕಳೆದ ವರ್ಷದ ಬಾಕಿ (ಪ್ರತಿ ಟನ್‌ಗೆ ₹150) ಕೊಡಿಸಬೇಕು’ ಎಂದು ಭಾಗ್ಯರಾಜ್ ಒತ್ತಾಯಿಸಿದರು.

‘ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಕಾಡಂಚಿನ ಪ್ರದೇಶದ ಬೆಳೆ ಮತ್ತು ರೈತರ ಪ್ರಾಣ ರಕ್ಷಣೆಗೆ ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು. ರಸಗೊಬ್ಬರವನ್ನು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.

‘ರೈತರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ 10 ದಿನಗಳೊಳಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. ಇಲ್ಲದಿದ್ದಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ, ಜಿಲ್ಲಾ ಘಟಕದ ಉಪಾಧ್ಯಕ್ಷ ಮುದ್ದಳ್ಳಿ ಚಿಕ್ಕಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಅಂಬಳೆ ಮಹಾದೇವಸ್ವಾಮಿ, ಸಂಚಾಲಕ ದೇವಿರಮ್ಮನಹಳ್ಳಿ ಮಹೇಶ್, ಸುಕೇತ್, ರವಿ, ಚಂದ್ರು, ರಾಜ್, ಅಂಡುವಿನಹಳ್ಳಿ ಮರಿಸ್ವಾಮಿ, ಶಿವಣ್ಣ, ದೇವಿರಮ್ಮನಹಳ್ಳಿ ಕುಮಾರ, ಮಹೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT