ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ: ಮಹಿಳೆಯರಲ್ಲಿ ಜಾಗೃತಿ ಹೆಚ್ಚಲಿ: ನ್ಯಾಯಾಧೀಶೆ ಪ್ರಭಾವತಿ

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಪ್ರಭಾವತಿ ಸಲಹೆ
Published 19 ಏಪ್ರಿಲ್ 2024, 7:30 IST
Last Updated 19 ಏಪ್ರಿಲ್ 2024, 7:30 IST
ಅಕ್ಷರ ಗಾತ್ರ

ಮೈಸೂರು: ‘ಮಹಿಳೆಯರಲ್ಲಿ ಮತದಾನ ಜಾಗೃತಿ ಹೆಚ್ಚಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ ಆಶಯ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮತದಾನ ಜಾಗೃತಿ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮದು ಪ್ರಜಾಪ್ರಭುತ್ವ ದೇಶ. ಹಕ್ಕನ್ನು ಚಲಾಯಿಸುವುದು ನಮ್ಮ ಜವಾಬ್ದಾರಿ. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಇದು ಕರ್ತವ್ಯವೂ ಹೌದು’ ಎಂದು ತಿಳಿಸಿದರು.

‘ಪುರುಷ– ಮಹಿಳೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಯಾವುದೇ ಅಸಮಾನತೆ, ತಾರತಮ್ಯ ಮಾಡಬಾರದು’ ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಪುರುಷನಿಗಿಂತ ಒಂದು ಹೆಜ್ಜೆ ಮುಂದಿದ್ದಾಳೆ’ ಎಂದರು.

‘ಜಿಲ್ಲೆಯಲ್ಲಿ ಮಹಿಳಾ ಮತದಾರರು ಜಾಸ್ತಿ ಇದ್ದಾರೆ. ಶೇ 100ರಷ್ಟು ಮತದಾನ ಆಗಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ನೈತಿಕ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯತ್ರಿ ಮಾತನಾಡಿ, ‘ಪ್ರತಿ ಕ್ಷೇತ್ರದಲ್ಲಿಯೂ ಇಂದು ಹೆಣ್ಣು ಸ್ವಾಭಿಮಾನಿಯಾಗಿ ದುಡಿಯುತ್ತಾ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾಳೆ. ಆದರೆ, ಮತದಾನ ಮಾಡುವಲ್ಲಿ ಹಿಂದುಳಿಯುತ್ತಿದ್ದಾರೆ. ಅದು ಈ ಚುನಾವಣೆಯಲ್ಲಿ ಮರುಳಿಸದಂತೆ ನೋಡಿಕೊಳ್ಳಬೇಕು’ ಎಂದರು.

ಎಸ್ಪಿ ಸೀಮಾ ಲಾಟ್ಕರ್ ಮಾತನಾಡಿ, ‘ನಮ್ಮ ಕಷ್ಟಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಉತ್ತಮ ಅಭ್ಯರ್ಥಿಯನ್ನು ನಾವೇ ಆಯ್ಕೆ ಮಾಡುವ ಅವಕಾಶವಿದ್ದು, ಅದನ್ನು ಬಳಸಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಮತ್ತು ಆಕಾಶವಾಣಿಯಿಂದ ಮತದಾನದ ಮಹತ್ವ ಕುರಿತು ಆಯೋಜಿಸಲಾಗಿದ್ದ ಪ್ರಬಂಧ ರಚನೆ, ರಸಪ್ರಶ್ನೆ, ರೀಲ್ಸ್ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ನಗರ ಪೊಲೀಸ್ ಆಯುಕ್ತ ರಮೇಶ್ ಬಿ., ಸಿಸಿಎಫ್‌ ಮಾಲತಿ ಪ್ರಿಯಾ, ಕೇಂದ್ರ ಸರ್ಕಾರದ ಚುನಾವಣಾ ಮಾಹಿತಿ ಅಧಿಕಾರಿ ಶ್ರುತಿ, ಚುನಾವಣಾ ರಾಯಭಾರಿ ತನಿಷ್ಕಾ ಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT