ಮೈಸೂರು: ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 15 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಇಲ್ಲಿನ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಭಾನುವಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಭಾನುವಾರದಿಂದಲೇ ನೀರು ಹರಿಸಲಾಗುವುದು ಎಂದು ಪ್ರಕಟಿಸಲಾಯಿತು.
‘ಮಳೆ ಕಡಿಮೆ ಆಗಿರುವುದರಿಂದ, ಜಲಾಶಯಕ್ಕೆ ಒಳಹರಿವು ಹೆಚ್ಚಿನ ಪ್ರಮಾಣದಲ್ಲಿ ಇಲ್ಲ. ಶೇ 33ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ, ಈ ನಿರ್ಣಯ ಮಾಡಲಾಗಿದೆ. ನಾಲೆಯ ಕೊನೆಯ ಭಾಗದವರೆಗೂ ನೀರು ತಲುಪುವಂತೆ ನೋಡಿಕೊಳ್ಳುವ ಕೆಲಸವನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ, ಅವರ ಪರವಾಗಿ ನಾವು ಹಾಗೂ ನಮ್ಮ ಸರ್ಕಾರ ಸದಾ ಇರುತ್ತದೆ’ ಎಂದು ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಎ.ಮಂಜು, ಡಿ.ರವಿಶಂಕರ್, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಹಾರಂಗಿ ಜಲಾಶಯ ನೀರು ಬಳಕೆದಾರರ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಎಸ್ಪಿಗಳು, ನೀರಾವರಿ ಇಲಾಖೆಯ ಎಂಜಿನಿಯರ್‌ಗಳು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.