ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕರ ಬಳಕೆ ಶಿಕ್ಷಾರ್ಹ

ಜಿಲ್ಲಾ, ಸೆಷನ್ಸ್ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ ಎಚ್ಚರಿಕೆ
Last Updated 13 ಜೂನ್ 2018, 10:35 IST
ಅಕ್ಷರ ಗಾತ್ರ

ಉಡುಪಿ: ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕೃತ್ಯಕ್ಕೆ ₹ 50 ಸಾವಿರದವರೆಗೆ ದಂಡ ಹಾಗೂ 2 ವರ್ಷದವರೆಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ ಹೇಳಿದರು.

ಕುಂದಾಪುರದ ಭಂಡಾರ್‌ಕರ್ಸ್‌ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕರ ಯೋಜನಾ ಸಂಘ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ, ಅನಕ್ಷರತೆ ಹಾಗೂ ಷೋಷಕರ ಆರ್ಥಿಕ ದುಸ್ಥಿತಿಯಿಂದ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಪಟಾಕಿ ತಯಾರಿಕೆ ಕಾರ್ಖಾನೆ, ಸಿಮೆಂಟ್ ಉದ್ಯಮ, ರೈಲ್ವೆ ಕಾಮಗಾರಿ ಸೇರಿದಂತೆ ಅಪಾಯಕಾರಿ ಉದ್ದಿಮೆಗಳಲ್ಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ನಿಷೇಧವಿದ್ದು, ಅಂತಹ ಸಂಸ್ಥೆಗಳ ಮಾಲೀಕರಿಗೆ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಮಕ್ಕಳು ಬೆಳೆಯುವ ಪರಿಸರ ಉತ್ತಮವಾಗಿದ್ದರೆ, ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ, ಮಕ್ಕಳ ಪರಿಸ್ಥಿತಿ ಉತ್ತಮವಾಗಿದ್ದರೆ ದೇಶ ಕೂಡ ಅಭಿವೃದ್ದಿ ಹೊಂದಲು ಸಾಧ್ಯ ಎಂದು ನ್ಯಾಯಾಧೀಶರು ಹೇಳಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆ.ಪ್ರಕಾಶ್, ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು.

ಸಹಾಯಕ ಆಯುಕ್ತ ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಡಿವೈಎಸ್ಪಿ ದಿನೇಶ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಕಾರ್ಯದರ್ಶಿ ಪ್ರಮೋದ್ ಹಂದೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಫುರ್ಟಡೋ, ಭಂಡಾರ್‌ಕರ್ಸ್‌ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಡಾ.ಜಿ.ಎಂ.ಗೊಂಡ, ಸಂಪನ್ಮೂಲ ವ್ಯಕ್ತಿ ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಉಪಸ್ಥಿತರಿದ್ದರು.

ಪ್ರಭಾರ ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ್ ಜೋಗೂರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘದ ಯೋಜನಾ ನಿರ್ದೇಶಕ ಪ್ರಭಾಕರ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಅರಿವು ಮೂಡಿಸಲು, ಕಲಾಕೇಂದ್ರ ಕೋಟೇಶ್ವರ ಅವರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಬಾಲ ಕಾರ್ಮಿಕ ಕಾನೂನಿನ ಅರಿವು ಎಲ್ಲರೂ ಹೊಂದಿರಬೇಕು. ಸುತ್ತಮುತ್ತಲಿನ ಉದ್ದಿಮೆಗಳಲ್ಲಿ ಮಕ್ಕಳು ದುಡಿಯುವುದು ಕಂಡುಬಂದರೆ ಸಮೀಪದ ಪೊಲೀಸ್ ಠಾಣೆ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಪಣತೊಟ್ಟಿದ್ದು, ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿ, ಬಿಸಿಯೂಟ, ಬಾಲ ಕಾರ್ಮಿಕರಿಗೆ ಪುರ್ನವಸತಿ, ಮಕ್ಕಳ ಕಲ್ಯಾಣನಿಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಾರ್ವಜನಿಕರು ಮತ್ತು ಸ್ವಯಂ ಸೇವಾ ಸಂಘಟನೆಗಳು ಸಹಕಾರ ಅಗ‌ತ್ಯ ಎಂದು ವೆಂಕಟೇಶ್ ನಾಯ್ಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT