ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಪೀಡಿತ ಪಟ್ಟಿಗೆ ಸೇರಿಸಿ

ಅಖಂಡ ಕರ್ನಾಟಕ ರೈತ ಸಂಘ ಆಗ್ರಹ
Last Updated 19 ಜೂನ್ 2019, 13:35 IST
ಅಕ್ಷರ ಗಾತ್ರ

ವಿಜಯಪುರ: ‘ಬಸವನಬಾಗೇವಾಡಿ, ನಿಡಗುಂದಿ ಮತ್ತು ಕೊಲ್ಹಾರ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು’ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಅರವಿಂದ ಕೆ.ಕುಲಕರ್ಣಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ. ಬಿತ್ತಿದ ಬೆಳೆ ಕೈಸೇರದ್ದರಿಂದ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಕೃಷಿ ಅಧಿಕಾರಿಗಳು ಮತ್ತು ತಹಶೀಲ್ದಾರರು ಸರಿಯಾದ ವರದಿ ಕೊಟ್ಟಿದ್ದರೂ ಈ ಮೂರು ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡುವ ಮೂಲಕ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.

‘ಬಸವನಬಾಗೇವಾಡಿ ತಾಲ್ಲೂಕಿನಲ್ಲಿಭೀಕರ ಬರಗಾಲವಿದೆ. ಕಂದಾಯ ಸಚಿವರು, ಸಂಬಂಧಿಸಿದ ಅಧಿಕಾರಿಗಳು ಬಂದು ಇನ್ನೊಮ್ಮೆ ಪರಿಶೀಲನೆ ನಡೆಸಬೇಕು. ಕೂಡಲೇ ಮೂರೂ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿ, ಪರಿಹಾರ ಧನ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

‘2018–19ರ ಮುಂಗಾರು ಬೆಳೆ ಹಾನಿ ₹31.20 ಕೋಟಿ, ಹಿಂಗಾರು ಹಂಗಾಮಿನಲ್ಲಿ ₹24.49 ಕೋಟಿ ಹಾನಿಯ ಬಗ್ಗೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇಷ್ಟಾದರೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಅಧಿಕಾರಿಗಳು ಮೂರು ತಾಲ್ಲೂಕುಗಳನ್ನು ಪಟ್ಟಿಯಿಂದ ಕೈಬಿಡುವ ಮೂಲಕ ರೈತರ ಕಗ್ಗೊಲೆಗೆ ಮುಂದಾಗಿದ್ದಾರೆ’ ಎಂದು ದೂರಿದರು.

‘ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಈ ಬಗ್ಗೆ ಗಮನ ಹರಿಸಿಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳ ನಾಯಕರು, ಮುಖಂಡರು ರೆಸಾರ್ಟ್ ರಾಜಕೀಯದಲ್ಲಿ ನಿರತರಾಗಿದ್ದಾರೆ. ಬೆಳೆಸಾಲ ಮನ್ನಾ ಮಾಡುವುದಾಗಿ ಹೇಳಿ ಅಧಿಕಾರದ ಗದ್ದುಗೆ ಹಿಡಿದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿದ್ದಾರೆ’ ಎಂದು ಆರೋಪಿಸಿದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಲ್.ಪಾಟೀಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಬಸವನಬಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ರಾಮ ಅಂಗಡಗೇರಿ, ಚಂದ್ರಾಮ ತೆಗ್ಗಿ, ಜಯಶ್ರೀ ಜಂಗಮಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT