ಶನಿವಾರ, ಜನವರಿ 25, 2020
22 °C
ಬೇಳೆ ಕಾಳುಗಳ ಮೇಲೆ ಶೇ 38ರಷ್ಟು ಆಮದು ಸುಂಕ ವಿಧಿಸಲು ಒತ್ತಾಯ

ಕೇಂದ್ರಕ್ಕೆ ತಪ್ಪು ಮಾಹಿತಿ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ‘ರಾಜ್ಯದಲ್ಲಿನ ತೊಗರಿ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ತಪ್ಪು ಮಾಹಿತಿಯಿಂದ ಕೂಡಿದೆ’ ಎಂದು ಪ್ರಾಂತ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ ಆರೋಪಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 15 ಲಕ್ಷ ಹೆಕ್ಟೇರ್ ತೊಗರಿ ಬಿತ್ತನೆ ಆಗಿದೆ. ಆದರೆ, ರಾಜ್ಯ ಸರ್ಕಾರವು ಕೇಂದ್ರಕ್ಕೆ 11 ಲಕ್ಷ ಹೆಕ್ಟೇರ್ ತೊಗರಿ ಬಿತ್ತನೆಯಾಗಿದೆ ಎಂದು ತಪ್ಪು ಮಾಹಿತಿ ನೀಡಿದೆ. ಇದರಿಂದ ರೈತರಿಗೆ ಅನ್ಯಾಯವಾಗಿದೆ’ ಎಂದು ದೂರಿದರು.

‘ಈ ಸಮಸ್ಯೆಗೆ ಕೇಂದ್ರ ಸರ್ಕಾರದ ಆಮದು ನೀತಿಯೇ ಕಾರಣವಾಗಿದೆ. ನಾಲ್ಕು ವರ್ಷಗಳಿಂದ ಬೇರೆ ದೇಶದಿಂದ ಬೇಳೆಕಾಳುಗಳ ಆಮದು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಆದ್ದರಿಂದ ಬೇಳೆ ಕಾಳುಗಳ ಮೇಲೆ ಶೇ 38ರಷ್ಟು ಆಮದು ಸುಂಕ ವಿಧಿಸಬೇಕು’ ಎಂದು ಒತ್ತಾಯಿಸಿದರು.

‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಬರ ಪರಿಹಾರ ನೀಡಬೇಕು. ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು’ ಎಂದು ಆಗ್ರಹಿಸಿದರು.

‘ಕಲಬುರ್ಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಡಿ.12ರಂದು ಬೆಳಿಗ್ಗೆ 11 ಗಂಟೆಗೆ ತೊಗರಿ, ಹೆಸರು ಹಾಗೂ ಉದ್ದು ಬೆಳೆಗಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಕೃಷಿ ತಜ್ಞರು ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಂಘದ ರಾಜ್ಯ ಸಮಿತಿ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಾರಾಯ ಈಳಗೇರ, ಭೀಮಪ್ಪ ಪೂಜಾರಿ ಇದ್ದರು.

ಪ್ರತಿಕ್ರಿಯಿಸಿ (+)