ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರ: ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Last Updated 19 ಅಕ್ಟೋಬರ್ 2019, 12:43 IST
ಅಕ್ಷರ ಗಾತ್ರ

ಶಿವಮೊಗ್ಗ: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಿಸಿಲ್ಲ. ಎರಡು ತಿಂಗಳಾದರೂ ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ ಎಂದು ಆರೋಪಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಪಕೋಡ ಮಾರುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆ, ನೆರೆ ಹಾವಳಿಗೆ ಸಿಲುಕಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರಿಗೆ ಸೂಕ್ತ ಪರಿಹಾರ ವಿತರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಆರ್ಥಿಕ ಹಿಂಜರಿತ ಭಾರಿಹೊಡೆತ ನೀಡಿದೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆಟೊಮೊಬೈಲ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಪರಿಣಾಮಕಾರ್ಮಿಕರುಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಅಧಿಕಾರ ಗದ್ದುಗೆ ಹಿಡಿಯುವ ಮೊದಲು ವರ್ಷಕ್ಕೆ 2 ಕೊಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಮೋದಿ ಪ್ರಧಾನಿಯಾದ ನಂತರ ಭರವಸೆ ಈಡೇರಿಸಿಲ್ಲ ಎಂದು ದೂರಿದರು.

ಪ್ರವಾಹದ ಸ್ಥಿತಿಯ 62 ದಿನಗಳ ನಂತರ ಕೇಂದ್ರ ಸರ್ಕಾರ ಪುಡಿಗಾಸಿನ ಪರಿಹಾರ ನೀಡಿದೆ. ₨ 38 ಸಾವಿರ ಕೋಟಿ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ವರದಿ ನೀಡಿದ್ದರೂ, ಕೇಂದ್ರ ₨ 1200 ಕೋಟಿ ಪರಿಹಾರ ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮನೆ, ಕೊಟ್ಟಿಗೆ, ಪೆಟ್ಟಿಗೆ ಅಂಗಡಿಗಳಿಗೂ ಹಾನಿಯಾಗಿದೆ. ಪರಿಹಾರ ನೀಡಲು ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎನ್ನುತ್ತಾರೆ. ತಕ್ಷಣ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪದವೀಧರರು ಪಕೋಡ ಮಾರುವಂತೆ ಬಿಜೆಪಿ ಸಲಹೆ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಸ್ಥಳದಲ್ಲೇ ಪಕೋಡ ಮಾಡಿದರು. ಅಲ್ಲಿದ್ದ ಜನರಿಗೆ ಮಾರಾಟ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್,ಸದಸ್ಯ ಕಲಗೋಡು ರತ್ನಾಕರ್, ಪಂಡಿತ್ ವಿ. ವಿಶ್ವನಾಥ್, ಸೌಗಂಧಿಕಾ, ವಿಜಯಲಕ್ಷ್ಮಿ ಪಾಟೀಲ, ಕವಿತಾ, ಯಮುನಾ, ಮಂಜುಳಾ, ಪುಷ್ಪಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT