ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಅಲ್ಪಸಂಖ್ಯಾತರ ಕಾಯ್ದೆಯ ಮರು ತಿದ್ದುಪಡಿಗೆ ಆಗ್ರಹ

Last Updated 23 ಡಿಸೆಂಬರ್ 2018, 16:10 IST
ಅಕ್ಷರ ಗಾತ್ರ

ಶಿವಮೊಗ್ಗ: ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಕಾಯ್ದೆಯನ್ನು ಮರು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಲೈಂಗಿಕ ಅಲ್ಪಸಂಖ್ಯಾತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಲೈಂಗಿಕ ಅಲ್ಪಸಂಖ್ಯಾತರ ಕಾಯ್ದೆ–2018ನ್ನು 27 ತಿದ್ದುಪಡಿಗಳ ಸಮೇತ ಲೋಕಸಭೆಯಲ್ಲಿ ಅನುಮೋದಿಸಲಾಗಿದೆ. ಇದರ ಜತೆಗೆ ಜುಲೈ 2018ರಲ್ಲಿ ಮಾನವ ಕಳ್ಳಸಾಗಾಣಿಕೆಯ ಕಾಯ್ದೆ–2018ಕ್ಕೂ ಸಮ್ಮತಿ ನೀಡಲಾಗಿದೆ. ಆದರೆ, ತಿದ್ದುಪಡಿ ಮಾಡಲಾದ ಕಾಯ್ದೆ ಜನವಿರೋಧಿಯಾಗಿದೆ. ಆದ್ದರಿಂದ ಇದನ್ನು ಮತ್ತೊಮ್ಮೆ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದರು.

2016ರ ಕಾಯ್ದೆ ಬಗ್ಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ವಿಮರ್ಶೆಗಳನ್ನು ಹಾಗೂ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಮೂಲಕ ಲೈಂಗಿಕ ಅಲ್ಪಸಂಖ್ಯಾತರಿಗೆ ದೇಶದ ಸಂವಿಧಾನ ನೀಡಿರುವ ಸಮಾನತೆ ಮತ್ತು ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಸೂದೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ, ಉದ್ಯೋಗ ಮುಂತಾದ ಕ್ಷೇತ್ರಗಳಲ್ಲಿ ಮೀಸಲಾತಿ ನೀಡದೇ ಅವಕಾಶವಂಚಿತರನ್ನಾಗಿ ಮಾಡಲಾಗಿದೆ. ಸಾಂಪ್ರದಾಯಿಕ ಆದಾಯ ಮೂಲವಾದ ಭಿಕ್ಷಾಟನೆಯನ್ನು ಅಪರಾಧ ಎಂದು ಎತ್ತಿ ಬಿಂಬಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ಕಾನೂನಾತ್ಮಕ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ. ನಮ್ಮ ಇಷ್ಟದಂತೆ ವಾಸವಿರಲು ಬಿಡದೆ ಪೋಷಕರೊಂದಿಗೆ ವಾಸಿಸಬೇಕು ಅಥವಾ ನ್ಯಾಯಾಲಯದ ಮೊರೆಹೋಗಬೇಕು ಎಂದು ಷರತ್ತು ವಿಧಿಸಲಾಗಿದೆ. ಈ ಮೂಲಕ ನಮ್ಮ ಬದುಕುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕಾಯ್ದೆ ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಪೂರ್ಣ ವಿರುದ್ಧವಾಗಿದೆ. ಹೀಗಾಗಿ ಈ ತಿದ್ದುಪಡಿಯನ್ನು ಪುನರ್‌ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT