ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 20 ರಷ್ಟು ಮಕ್ಕಳಿಗೆ ನ್ಯೂಮೋನಿಯಾ: ಡಿಸಿ

ನ್ಯೂಮೋನಿಯಾ ಯಶಸ್ವಿಯಾಗಿ ತಟಸ್ಥಗೊಳಿಸುವಿಕೆ: ತರಬೇತಿ ಕಾರ್ಯಾಗಾರ
Last Updated 5 ನವೆಂಬರ್ 2022, 14:13 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿಐದು ವರ್ಷದೊಳಗಿನ ಮಕ್ಕಳು ಸಾವನಪ್ಪುವುದಕ್ಕೆ ನ್ಯೂಮೋನಿಯಾ ಹಾಗೂ ಡೈರಿಯಾ ಕಾರಣವಾಗಿದ್ದು, ಪ್ರತಿವರ್ಷ ಶೆ 20ರಷ್ಟು ಮಕ್ಕಳು ನ್ಯೂಮೋನಿಯಾ ಹಾಗೂ ಡೈರಿಯಾದಿಂದ ಸಾವನಪ್ಪುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶನಿವಾರ ಹಮ್ಮಿಕೊಂಡಿದ್ದ ಸಾಮಾಜಿಕ ಜಾಗೃತಿ ಮತ್ತು ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸುವ ಕ್ರಮಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ನ್ಯೂಮೋನಿಯ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತರಬೇತಿ ಕಾರ್ಯಗಾರದ ಮೂಲಕ ಪಡೆದು ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಗಟ್ಟಲು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಾಗಾರವನ್ನು ಗಂಭೀರವಾಗಿ ಪರಿಗಣಿಸಿ ತರಬೇತಿ ಪಡೆಯಬೇಕು.

ಈಗಾಗಲೇ ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ ಭಾರತ ಎಂಬ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಈ ಯೋಜನೆಗಳನ್ನು ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜನರಲ್ಲಿ ತಲುಪಿಸಿದರೆ ಜನರಲ್ಲಿ ಆರೋಗ್ಯದ ಬಗ್ಗೆ ಇರುವ ಆರ್ಥಿಕ ಭಯ ದೂರವಾಗುತ್ತದೆ. ಆದ್ದರಿಂದ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಶ್ರಮ ವಹಿಸಬೇಕು ಎಂದು ತಿಳಿಸಿದರು.

ಕಾಯಕಲ್ಪ ಯೋಜಜನೆಯಡಿ ಮೂಲ ಸೌಕರ್ಯಗಳನ್ನೊಳಗೊಂಡ ವೈದ್ಯಕೀಯ ಸಂಸ್ಥೆಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಜಿಲ್ಲೆಯ ಎಲ್ಲ ವೈದ್ಯಕೀಯ ಸಂಸ್ಥೆಗಳಿಗೆ ಕಾಯಕಲ್ಪ ಪ್ರಮಾಣ ಪತ್ರ ದೊರೆಯುವಂತಾಗಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಮುಖ್ಯವಾಗಿ ಗ್ರಾಮೀಣ ಮಟ್ಟಗಳಲ್ಲಿ ಶೌಚಾಲಯಗಳ ಬಳಕೆಯಾಗುತ್ತಿಲ್ಲ. ಪಂಚಾಯಿತಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಶ್ರಮಿಸಬೇಕು. ಆಗ ನ್ಯೂಮೋನಿಯದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ರಾಯಚೂರು ಜಿಲ್ಲೆ ಮಹತ್ವಾಕಾಂಕ್ಷೆ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಜಾಗೃತಿ ಮತ್ತು ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಕ್ಷಾರ್ಥ ಐಎಎಸ್ ಅಧಿಕಾರಿ ಅಪರ್ಣ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ, ನವೋದಯ ವೈದ್ಯಕೀಯ ಕಾಲೇಜಿನ ಮುಖ್ಯಸ್ಥೆ ಡಾ.ಗೀತಾಲಕ್ಕ್ಷ್ಮೀ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT