ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ಸಾವಿರ ಹುದ್ದೆಗಳ ಭರ್ತಿ ಶೀಘ್ರ: ಸಚಿವ ಶರಣಪ್ರಕಾಶ ಪಾಟೀಲ ಭರವಸೆ

Published 17 ಸೆಪ್ಟೆಂಬರ್ 2023, 13:54 IST
Last Updated 17 ಸೆಪ್ಟೆಂಬರ್ 2023, 13:54 IST
ಅಕ್ಷರ ಗಾತ್ರ

ರಾಯಚೂರು: ‘ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 50 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಹಾಗೂ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿಕೊಡುವ ದಿಸೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 25ರಂದು ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಲ್ಲಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಜನಸ್ನೇಹಿ ಆಡಳಿತ ಕೊಡುವ ಉದ್ದೇಶದಿಂದ ಜನತಾ ದರ್ಶನ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಅಧಿಕಾರಿಗಳು ‌ಇದಕ್ಕೆ ಸಜ್ಜಾಗಬೇಕು’ ಎಂದು ಸೂಚನೆ ನೀಡಿದರು.

‘ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ಯಾಬಿನೆಟ್ ಉಪ ಸಮಿತಿಯ ಸಭೆ ಚರ್ಚಿಸಲಾಗುವುದು. ಮೆರಿಟ್, ರೋಸ್ಟರ್‌ ಆಧಾರದ ಮೇಲೆ 50 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಇದಲ್ಲದೆ 10 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ₹5 ಸಾವಿರ ಕೋಟಿ ಕೊಡಲಾಗಿದೆ. ಪಾರದರ್ಶಕ, ನಿಸ್ವಾರ್ಥ, ಸತ್ಯ ನ್ಯಾಯ ಆಡಳಿತ ನೀಡಲು ಸರ್ಕಾರ ಬದ್ಧ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದರು.

‘ಬರ ನಿರ್ವಹಣೆ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲಾಗುವುದು. ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿ ಅನುಷ್ಠಾನಕ್ಕೆ ಬದ್ಧವಾಗಿದೆ. ಶಾಂತಿ‌‌ ಸುವ್ಯವಸ್ಥೆ ಕಾಪಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ನೀಡಲಾಗುವುದು’ ಎಂದು ತಿಳಿಸಿದರು.

‘ಯುಪಿಎ ಸರ್ಕಾರ ಸಂವಿಧಾನಕ್ಕೆ 371(ಜೆ) ಅಡಿಯಲ್ಲಿ ತಿದ್ದುಪಡಿ ತಂದು ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ನೆರವಾಗಿದೆ. ಈ ಭಾಗಕ್ಕೆ ವಿಶೇಷ ಸೌಲಭ್ಯ ತಂದುಕೊಡುವಲ್ಲಿ ಶ್ರಮಿಸಿದ ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಅವರನ್ನು ಮರೆಯಲಾಗದು’ ಎಂದರು.

ಜಾಗೃತಿ ಮೂಡಿಸಿ: ‘ಕಲಂ 371( ಜೆ) ಅಡಿಯಲ್ಲಿ ಈ ಭಾಗದ ಎಲ್ಲ ಜಾತಿ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ, ಉಪನ್ಯಾಸ ಕಾರ್ಯಕ್ರಮ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಬೇಕಾಗಿದೆ’ ಎಂದು ತಿಳಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಬದ್ಧ

‘ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದಾರೆ’ ಎಂದು ಸಚಿವರು ತಿಳಿಸಿದರು.

‘ನಗರದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡಲಾಗುವುದು. ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದೆ’ ಎಂದರು.

ಧ್ವಜಾರೋಹಣದ ನಂತರ ಕೆಎಸ್‌ಆರ್‌ಪಿ, ಡಿಎಆರ್‌, ನಾಗರಿಕ ಪೊಲೀಸ್‌, ಮಹಿಳಾ ಪೊಲೀಸ್‌, ಗೃಹ ರಕ್ಷಕ ದಳ, ಎನ್‌ಸಿಸಿ ಕೆಡೆಟ್, ಸ್ಕೌಟ್ಸ್‌ ಮತ್ತು ಗೈಡ್ಸ್, ವಿವಿಧ ಸರ್ಕಾರಿ ಪ್ರೌಢ ಶಾಲೆ ಹಾಗೂ ಖಾಸಗಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು.

ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜನಗೌಡ, ಪ್ರಭಾರ ಜಿಲ್ಲಾಧಿಕಾರಿಯಾದ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ರಾಯಚೂರು ಉಪ ವಿಭಾಗಾಧಿಕಾರಿ ಮೆಹಬೂಬಿ ಇದ್ದರು.

ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು
ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಮಾರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT