ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ತಡೆಗೆ ಕ್ರಿಯಾಶೀಲರಾಗಿ: ಎಡಿಸಿ ದುರುಗೇಶ ಸಲಹೆ

Last Updated 20 ಜುಲೈ 2020, 16:05 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಚಿಸಲಾಗಿರುವ ವಿವಿಧ ಸಮಿತಿಗಳ ಮುಖ್ಯಸ್ಥರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ ತಿಳಿಸಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ನಗರಸಭೆಯಿಂದ ಸೋಮವಾರ ಏರ್ಪಡಿಸಿದ್ದ ಕೋವಿಡ್-19 ವಿಪತ್ತು ನಿರ್ವಹಣೆಯಲ್ಲಿ ಕರ್ನಾಟಕ ರಾಜ್ಯ, ನಗರ, ಸ್ಥಳಿಯ ಸಂಸ್ಥೆಗಳ ನಗರ ವಾರ್ಡ್ ಮಟ್ಟದ ಕಾರ್ಯಾಚರಣೆ ಪಡೆ ಹಾಗೂ ಬೂತ್ ಮಟ್ಟದ ಸಮಿತಿಗಳ ಪಾತ್ರ ಮತ್ತು ಜವಾಬ್ದಾರಿಗಳು ಕುರಿತು ಆನ್‌ಲೈನ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿ ರಚಿಸಿರುವ ಸಮಿತಿಗಳು ಐಎಲ್‌ಎ, ಎಸ್‌ಎಆರ್‌ಐ ಪ್ರಕರಣಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಕೋವಿಡ್-19 ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ, ತಹಶೀಲ್ದಾರ್‌, ತಾಲ್ಲೂಕು ಪಂಚಾಯಿತಿ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಕೇಂದ್ರ ಪ್ರಾರಂಭಿಸಲಾಗಿದೆ. ಕೊರೊನಾ ಬಗ್ಗೆ ಜನರಲ್ಲಿ ಇರುವ ಭಯವನ್ನು ದೂರ ಮಾಡಲು ಕರೆ ಮಾಡಬಹುದು ಎಂದರು.

ಐಎಲ್‌ಐ ವ್ಯಾಪ್ತಿಯಲ್ಲಿ ಕೆಮ್ಮು, ಶೀತ, ಜ್ವರ ಮತ್ತು ಎಸ್.ಎ.ಆರ್.ಐ ಪ್ರಕರಣಗಳಾದ ಉಸಿರಾಟದಿಂದ ಸಮಸ್ಯೆ ಎದುರಿಸುತ್ತಿರುವವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಕೋವಿಡ್-19 ತಪಾಸಣೆ ಮಾಡಬೇಕು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

10 ವರ್ಷದೊಳಗಿನ ಮಕ್ಕಳು, ವಯೋ ವೃದ್ಧರು ಹಾಗೂ ಗರ್ಭಿಣಿಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕಾಯಿಸಿದ ನೀರು ಮತ್ತು ಸುಂಟಿ ಚಹಾ ಕುಡಿಯಬೇಕೆಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹರುಡವುದನ್ನು ನಿಯಂತ್ರಿಸಲು ಪ್ರಮುಖವಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಜೇರ್‌ ಬಳಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಬೇಕು ಹಾಗೂ ಮುಖದ ಮೇಲೆ ಕೈ ಆಡಿಸಬಾರದು. ಮಾಸ್ಕ್ ಧರಿಸದೆ ಇದ್ದವರಿಗೆ ದಂಡ ವಿಧಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಕೋವಿಡ್-19 ನಿಯಂತ್ರಿಸಲು ಜಿಲ್ಲಾಮಟ್ಟದಲ್ಲಿ 24, ಬೂತ್ ಮಟ್ಟದಲ್ಲಿ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮ, ವಾರ್ಡ್ ಮಟ್ಟದಲ್ಲಿಯೂ ಸಮಿತಿ ರಚಿಸುವಂತೆ ಸೂಚಿಸಿರುವ ಹಿನ್ನಲೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಹೋಂ ಕ್ವಾಂರೆಂಟೈನ್ ಮತ್ತು ಸರ್ಕಾರಿ ಸಾಂಸ್ಥಿಕ ಕ್ವಾರೆಂಟೈನ್ ಕೇಂದ್ರಗಳಲ್ಲಿ ಇರಿಸಿಲಾದ ಸೋಂಕಿತರ ಮೇಲೆ ಹಚ್ಚಿನ ನಿಗಾವಹಿಸಲಾಗಿದೆ. ಅನಾವಶ್ಯಕವಾಗಿ ಮನೆಯಿಂದ ತಿರುಗಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ದರೂರು ಬಸವರಾಜ, ಈ.ಶಶಿರಾಜ್, ಬಿ.ರಮೇಶ, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು, ಯೋಜನಾಧಿಕಾರಿ ಮಹೇಂದ್ರ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT