ಶುಕ್ರವಾರ, ಜೂನ್ 25, 2021
20 °C
ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಪುಷ್ಪಮಾಲೆ ಹಾಕಿ ನಮನ

ರಾಯಚೂರು: ಜಿಲ್ಲೆಯಾದ್ಯಂತ ಸರಳವಾಗಿ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಆದೇಶದಂತೆ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯನ್ನು ಜಿಲ್ಲೆಯಾದ್ಯಂತ ಸರಳವಾಗಿ ಆಚರಿಸಲಾಯಿತು.

ವಿವಿಧ ಸರ್ಕಾರಿ, ಅರೆಸರ್ಕಾರಿ ಕಚೇರಿಗಳಲ್ಲಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಕಚೇರಿಗಳಲ್ಲಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಲಾಯಿತು. ಪ್ರಮುಖ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಸರಳ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಕೇಂದ್ರದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಯ ಹತ್ತಿರ ಮಂಗಳವಾರ ಬೆಳಿಗ್ಗೆಯಿಂದ ಜನರು ಸರದಿಯಲ್ಲಿ ನಿಂತು ಪುಷ್ಪಮಾಲೆ ಹಾಕುತ್ತಿರುವುದು ಕಂಡುಬಂತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಪೊಲೀಸರು ಗುರುತು ಹಾಕಿದ್ದರು. ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಅನಗತ್ಯವಾಗಿ ಜನರು ಹೊರಬರುವುದನ್ನು ನಿರ್ಬಂಧಿಸಲಾಗಿತ್ತು.

ದಲಿತಪರ ಸಂಘಟನೆಗಳ ಪದಾಧಿಕಾರಿಗಳು, ಸಮಾಜಮುಖಿ ಸಂಘಟನೆಗಳ ಪದಾಧಿಕಾರಿಗಳು, ರಾಜಕೀಯ ಮುಖಂಡರು ನೆರೆದಿದ್ದರು. ಒಬ್ಬರ ನಂತರ ಒಬ್ಬರು ಪುತ್ಥಳಿ ಹತ್ತಿರ ಹೋಗಿ ಪುಷ್ಪಮಾಲೆ ಹಾಕಿ ಗೌರವ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್ ಬೋಸರಾಜ, ಶಾಸಕ ಡಾ. ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ ನಾಯಕ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ತಹಸಿಲ್ದಾರ್ ಡಾ. ಹಂಪಣ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುಬ್ರಮಣ್ಯ ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು