ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ದಂಧೆಗೆ ಕಡಿವಾಣ ಹಾಕಿ: ಸಿಎಂಗೆ ಮನವಿ

Published 14 ಮೇ 2024, 15:22 IST
Last Updated 14 ಮೇ 2024, 15:22 IST
ಅಕ್ಷರ ಗಾತ್ರ

ರಾಯಚೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕು. ಉಚಿತ, ಕಡ್ಡಾಯ ಹಾಗೂ ವೈಜ್ಞಾನಿಕ ಶಿಕ್ಷಣ ಪದ್ಥತಿಯ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಪ್ರತಿವರ್ಷ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ಮತ್ತು ಮಧ್ಯಮ ವರ್ಗದ ಪಾಲಕರ ಮಕ್ಕಳಿಗೆ ಸಹಕಾರಿಯಾಗದೇ ವಿಷಕಾರಿಯಾಗುತ್ತಿವೆ ಎಂದು ದೂರಿದರು.

ವ್ಯಾಪಾರದ ಕೇಂದ್ರವನ್ನಾಗಿ ಮಾಡಿ ಅಕ್ಷರಗಳನ್ನು ಆಯಾ ಸಂಸ್ಥೆಯವರು ತಕ್ಕಡಿಯಲ್ಲಿ ಮಾರಾಟಕ್ಕಿಟ್ಟಿದ್ದಾರೆ. ಸರ್ಕಾರದ ಸಂವಿಧಾನಾತ್ಮಕ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಮರ್ಪಕವಾಗಿ ಜಾರಿಯಾಗದೇ ನೂರಾರು ಸರ್ಕಾರಿ ಶಾಲಾ–ಕಾಲೇಜುಗಳನ್ನು ಮುಚ್ಚಲಾಗುತ್ತಿದೆ ಎಂದು ತಿಳಿಸಿದರು.

ಬಲಿಷ್ಠ ರಾಜಕಾರಣಿ, ಶ್ರೀಮಂತರು ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಹೂಡಿ ಪ್ರಾರಂಭಿಸಿದ ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಬಡವರ ರಕ್ತ ಹೀರಿ ಜೀವಿಸುತ್ತಿವೆ. ಕ್ಯಾಪಿಟೇಷನ್, ಡೊನೇಷನ್, ದುಬಾರಿ ಶುಲ್ಕ, ಕಿರುಕುಳ, ಕಡಿಮೆ ಅಂಕ, ಮಾನಸಿಕ ಹಿಂಸೆ ನೀಡುತ್ತಾ, ಸಾಮಾಜಿಕ ಮೌಲ್ಯಾಧಾರಿತ ಸಮ ಸಮಾಜ, ವೈಜ್ಞಾನಿಕ ಶಿಕ್ಷಣಕ್ಕೆ ಒತ್ತು ನೀಡದೆ, ವ್ಯಾಪಾರದ ಕೇಂದ್ರಗಳಾಗಿ ಬದಲಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನೂ ಶಿಕ್ಷಣ ಕ್ಷೇತ್ರದಲ್ಲಿ ಕೆಲವೊಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಧಾರ್ಮಿಕ ಮೂಲಭೂತವಾದದತ್ತ ಮುಖ ಮಾಡುವ ಧರ್ಮ, ಜಾತಿ, ಮತ, ಪಂಥಗಳಿಗೆ ಒತ್ತು ಕೊಡುತ್ತ ಅವೈಜ್ಞಾನಿಕವಾಗಿ ಮೌಢ್ಯಗಳನ್ನು ಮಕ್ಕಳಲ್ಲಿ ಬಿತ್ತುತ್ತ ಆಧುನಿಕ ಕಾಲಘಟ್ಟದಲ್ಲಿ ಪುರಾತನ ಯುಗಕ್ಕೆ ಕರೆದೊಯ್ಯಲಾಗುತ್ತಿದೆ. ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕದ ದಂಧೆ ಮಿತಿ ಮೀರುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಪ್ರತಿವರ್ಷ ಶೇ 15ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರ ಹೈಕೋರ್ಟ್‌ನ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಖಾಸಗಿ ಶಾಲೆಗಳೊಂದಿಗೆ ಕೈಜೋಡಿಸಿದೆ. 2024-25 ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ದುಬಾರಿ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರ ತಡೆ ನೀಡಬೇಕಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರ, ಶಿಕ್ಷಣ ಸಂಸ್ಥೆಗಳ ಸಭೆ ಕರೆದು, ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ಜಿಲ್ಲಾ ಸಮಿತಿ ಸದಸ್ಯ ಅಜೀಜ್ ಜಾಗೀರದಾರ, ತಾಲ್ಲೂಕು ಕಾರ್ಯದರ್ಶಿ ಆರ್.ಹುಚ್ಚರೆಡ್ಡಿ, ಜಿಲ್ಲಾ ಸಮಿತಿ ಸದಸ್ಯ ಸೈಯದ್ ಅಬ್ಬಾಸ್ ಅಲಿ, ನಬಿಸಾಬ್, ನಿರಂಜನ ಕುಮಾರ, ಈರಣ್ಣ ನಾಯಕ ಹಾಗೂ ಬಸವರಾಜ ಕವಿತಾಳ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT