ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ ಮಾಡಿ ಮಾದರಿಯಾಗಿ: ಎಲ್‌.ಚಂದ್ರಶೇಖರ್‌

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಜಾಥಾ
Last Updated 1 ಅಕ್ಟೋಬರ್ 2022, 14:11 IST
ಅಕ್ಷರ ಗಾತ್ರ

ರಾಯಚೂರು: ರಕ್ತದಾನ ಶ್ರೇಷ್ಠದಾನ. ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜನರ ಬಾಳಿಗೆ ಆಶಾಕಿರಣವಾಗುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೋಲಿಸ್ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ಭಾರತೀಯ ವೈದ್ಯಕೀಯ ಸಂಘ, ರಿಮ್ಸ್ ಬೋಧಕ ಆಸ್ಪತ್ರೆ, ನವೋದಯಾ ಆಸ್ಪತ್ರೆ, ಜಿಲ್ಲೆಯ ರಕ್ತನಿಧಿ ಕೇಂದ್ರಗಳು, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ರೆಡ್ ಕ್ರಾಸ್ ಸಂಸ್ಥೆ, ಎಸ್.ಕೆ.ಇ.ಪ್ಯಾರಾ ಮೆಡಿಕಲ್ ಕಾಲೇಜ್, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್.ಎಸ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಜಾಥಾಗೆ ಚಾಲನೆ ಹಸಿರುನಿಶಾನೆ ತೋರಿಸುವ ಪೂರ್ವ ಮಾತನಾಡಿದರು.

ರಕ್ತದಾನ ಮಾಡುವುದು ಸಮಾಜದ ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಬೇಕು. ಆರೋಗ್ಯವಂತರು ರಕ್ತದಾನ ಮಾಡಿದರೆ ಮಾತ್ರ ರೋಗಗ್ರಸ್ತರು, ಅಪಘಾತಕ್ಕೀಡಾಗಿ ಜೀವ ಸಂಕಷ್ಟಕ್ಕೀಡಾದವರ ಜೀವ ಉಳಿಸಲು ಸಾಧ್ಯ ಎಂದು ಹೇಳಿದರು.

ರಕ್ತದಾನದಿಂದ ಯಾವುದೇ ಅಪಾಯವಿಲ್ಲ. ಯಾವುದೇ ಆರೋಗ್ಯವಂತ ವ್ಯಕ್ತಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. 18ರಿಂದ 60 ವರ್ಷದೊಳಗಿನ ಎಲ್ಲ ಆರೋಗ್ಯವಂತರು, ಹೆಣ್ಣು-ಗಂಡು ಎಂಬ ಬೇಧವಿಲ್ಲದೇ ರಕ್ತದಾನ ಮಾಡಬಹುದು. ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತ ಉತ್ಪತ್ತಿ ಆರಂಭವಾಗುತ್ತದೆ. 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದಲ್ಲಿ ರಕ್ತ ಶೇಖರಣೆಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಗ್ರಾಮೀಣ ಯುವಕರಲ್ಲಿ ರಕ್ತದಾನಕ್ಕೆ ಪ್ರೇರಣೆ ನೀಡುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ್, ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಬಸವರಾಜ ಪೀರಾಪುರ, ರಿಮ್ಸ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ.ಭಾಸ್ಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯ ಶಂಕರ್, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೂಯಿನುದ್ದೀನ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT