ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅವಧಿಯಲ್ಲಿ 6 ಬಾರಿ ಬಾಂಬ್ ಸ್ಫೋಟ: ಸಚಿವ ರಾಮಲಿಂಗಾರೆಡ್ಡಿ

Published 5 ಮಾರ್ಚ್ 2024, 15:46 IST
Last Updated 5 ಮಾರ್ಚ್ 2024, 15:46 IST
ಅಕ್ಷರ ಗಾತ್ರ

ರಾಯಚೂರು: ‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇವಲ ಒಂದು ಬಾರಿ ಬಾಂಬ್‌ ಸ್ಫೋಟವಾಗಿದೆ. ತ್ವರಿತಗತಿಯಲ್ಲಿ ತನಿಖೆ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 6 ಬಾರಿ ಬಾಂಬ್ ಸ್ಫೋಟ ಸಂಭವಿಸಿತ್ತು. ಆದರೆ, ಇದೀಗ ವಿರೋಧ ಪಕ್ಷದವರು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನಿಸಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಸಾರಿಗೆ ಸಚಿವ ಎಂ.ರಾಮಲಿಂಗಾರೆಡ್ಡಿ ಟೀಕಿಸಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2010ರ ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಾಂಬ್ ಸ್ಫೋಟ, 2008ರ ಜುಲೈ 25ರಂದು ಸರಣಿ ಬಾಂಬ್ ಸ್ಫೋಟ, ಜಗದೀಶ ಶೆಟ್ಟರ್ ಅವಧಿಯಲ್ಲಿ ಮಲ್ಲೇಶ್ವರಂ ಬಾಂಬ್ ಸ್ಫೋಟ, ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಮಂಗಳೂರು ಕುಕ್ಕರ್ ಸ್ಫೋಟ ನಡೆದಿದೆ ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

‘ಬಿಜೆಪಿ ಮುಖಂಡರು ತಮ್ಮ ಅಧಿಕಾರಾವಧಿಯಲ್ಲಿನ ಸ್ಫೋಟದ ಘಟನೆಗಳನ್ನು ಮರೆಮಾಚಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಬಿಜೆಪಿಯವರಿಗೆ ನೈತಕತೆ ಎನ್ನುವುದೇ ಇಲ್ಲ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಚುರುಕಾಗಿ ಕೆಲಸ ಮಾಡುತ್ತಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದರು.

‘ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಕ್ರಮ ಆಗಿಲ್ಲ. ದೇಶದ್ರೋಹಿ ಹೇಳಿಕೆ ಯಾರು ನೀಡಿದರೂ ತಪ್ಪೇ, ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗಿದ ಆರೋಪದ ಮೇಲೆ ಬಂಧಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಹಿಂದಿನ ಲೋಕಸಭೆ ಚುನಾವಣೆ ಸಮಯದಲ್ಲಿ ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿತ್ತು. ಎಲ್ಲ ಕಾಲದಲ್ಲಿ ಅಪರಾಧ ಚಟುವಟಿಕೆಗಳು ನಡೆದಿವೆ. ಸರ್ಕಾರ ಗಟ್ಟಿಯಾಗಿದ್ರೆ ನಿಯಂತ್ರಣ ಸಾಧ್ಯವಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT