ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜದ ಏಳಿಗೆಗೆ ಪಕ್ಷಾತೀತ ಒಂದಾಗಿ

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ಕೆ. ಶಿವರಾಂ ಸಲಹೆ
Last Updated 13 ಫೆಬ್ರುವರಿ 2021, 14:08 IST
ಅಕ್ಷರ ಗಾತ್ರ

ರಾಯಚೂರು: ‘ಡಾ. ಬಿ.ಆರ್ ಅಂಬೇಡ್ಕರ್ ಅವರ ಆಶಯದಂತೆ ಪರಿಶಿಷ್ಟ ಸಮಾಜದ ಏಳಿಗೆಗೆ ಶಿಕ್ಷಣ, ಸಂಘಟನೆ ಮುಖ್ಯವಾಗಿದ್ದು, ಸಮಾಜದ ಅಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ಒಂದಾಗಬೇಕು’ ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ಕೆ. ಶಿವರಾಂತಿಳಿಸಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಜಿಲ್ಲಾ ಘಟಕದಿಂದ ಶನಿವಾರ ಆಯೋಜಿಸಿದ್ದ ನೂತನವಾಗಿ ಆಯ್ಕೆಯಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ, ಸದಸ್ಯರಿಗೆ ಸನ್ಮಾನ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

‘ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅವಶ್ಯವಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಕೆಎಎಸ್, ಐಎಎಸ್ ಅಧಿಕಾರಿಯಾಗಿ ಮಾಡಬೇಕು. ಉನ್ನತ ಸಮಾಜದ ಕೈಯಲ್ಲಿ ಇದ್ದ ಅಧಿಕಾರವನ್ನು ಮತದಾನದ ಮೂಲಕ ಎಲ್ಲರಿಗೂ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರ ಕೊಟ್ಟ ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಪ್ರತಿಯೊಬ್ಬರು ಚುನಾವಣೆಯಲ್ಲಿ ಮತ ಹಾಕಲು ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು. ಹಣದಾಸೆಗಾಗಿ ಮತದಾನ ಮಾಡಲು ಮುಂದಾದರೆ, ಅಂಬೇಡ್ಕರ್ ಅವರಿಗೆ ವಂಚನೆ ಮಾಡಿದಂತಾಗುತ್ತದೆ’ ಎಂದರು.

‘33 ಕೋಟಿ ದೇವತೆಗಳು ಮಾಡದಂತಹ ಕೆಲಸವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಮಾಡಿದ್ದಾರೆ. ಡಾ.ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಎಲ್ಲರೂ ತಿಳಿದುಕೊಳ್ಳಬೇಕು. ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರು ಸಮಾಜಕ್ಕೆ ಗೌರವ ತರಬೇಕು’ ಎಂದು ಹೇಳಿದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದು ಶ್ಲಾಘನೀಯ. ಖರ್ಗೆ ಅವರ ಸ್ಥಾನ ಮತ್ತೊಬ್ಬರು ತುಂಬಲು ಅಸಾಧ್ಯ. ಅವರ ಸೇವೆಯನ್ನು ಗುರುತಿಸಿ ಮಹತ್ವದ ಸ್ಥಾನ ನೀಡಿದೆ ಎಂದರು.

ಶಾಸಕ ಬಸನಗೌಡ ದದ್ದಲ್ ಮಾತನಾಡಿ, ನೂತನವಾಗಿ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾದ ಸದಸ್ಯರು ತಮ್ಮ ಜವಾಬ್ದಾರಿ ಅರಿತುಕೊಂಡು ಜನರಿಗೆ ಸೇವೆ ಸಲ್ಲಿಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ ಮಾತನಾಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗಿಂತ ಗ್ರಾಮ ಪಂಚಾಯಿತಿಗಳಿಗೆ ವಿವಿಧ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡು ಜನರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಶಾಸಕ ಡಾ.ಶಿವರಾಜ ಪಾಟೀಲ, ಮಹಾಸಭಾದ ಜಿಲ್ಲಾಧ್ಯಕ್ಷ ಜಗನ್ನಾಥ ಸುಂಕಾರಿ, ನಗರ ಘಟಕ ಅಧ್ಯಕ್ಷ ಸತ್ಯನಾರಾಯಣ, ಉಪನ್ಯಾಸಕ ರಾಮಚಂದ್ರಪ್ಪ ಶಿವಂಗಿ, ಕೃಷಿ ಇಲಾಖೆ ಉಪನಿರ್ದೇಶಕ ಸರಸ್ವತಿ, ಕಾರ್ಮಿಕ ಇಲಾಖೆಯ ಅಧಿಕಾರಿ ಜನಾರ್ಧನ, ಮಹಾಸಭಾದ ತಾಲ್ಲೂಕು ಅಧ್ಯಕ್ಷ ಆಂಜನೇಯ, ನಗರಸಭೆ ಸದಸ್ಯ ಬಿ.ರಮೇಶ, ಶಿವರಾಜ ಪನ್ನೂರು, ರಾಮಕೃಷ್ಣ, ಮಲ್ಲಪ್ಪ ಸರ್ಜಾಪುರ ಹಾಗೂ ಮತ್ತಿತರರು ಇದ್ದರು. ಶಿಕ್ಷಕ ಸಂಘದ ಮಾಜಿ ಜಿಲ್ಲಾಧ್ಯಕ್ಷ ವೀರಭದ್ರಪ್ಪ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT