ರಾಯಚೂರು: ರಾಜ್ಯ ಸರ್ಕಾರ ವಿಳಂಬ ಮಾಡದೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 13ರಂದು ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಹನಮಂತ ಮನ್ನಾಪುರ ತಿಳಿಸಿದರು.
ಒಳ ಮೀಸಲಾತಿಯ ಜಾರಿ ವಿಚಾರ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರಿಂಕೋರ್ಟ್ ತೀರ್ಪು ನೀಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಅನೇಕ ವರ್ಷಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಶಕದಿಂದ ಹೋರಾಟ ಮಾಡಿದ್ದರ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸ್ವೀಕರಿಸಿ ಜೆ.ಮಾಧುಸ್ವಾಮಿ ನೇತೃತ್ವದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಒಳ ಮೀಸಲಾತಿ ಪರ ಈಚೆಗೆ ಸುಪ್ರಿಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂದರು.