ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಾಯವಾಣಿಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ’

ಸಹಾಯವಾಣಿ-1098 ದಿನಾಚರಣೆ ಹಾಗೂ ಮಾಸಾಚರಣೆ ಜಾಥಾ
Last Updated 17 ಮೇ 2022, 13:53 IST
ಅಕ್ಷರ ಗಾತ್ರ

ರಾಯಚೂರು: ಸಮಸ್ಯೆಗೆ ದಿನದ 24 ಗಂಟೆಯೂ ಸ್ಪಂದಿಸುವ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಮೂರನೇಯ ಹೆಚ್ಚುವರಿ ಹಿರಿಯ ದಿವಾಣಿ ನ್ಯಾ. ದಯಾನಂದ ಬೇಲೂರೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಹಾಗೂ ಮಕ್ಕಳ ಸಹಾಯವಾಣಿ-1098 ಯಿಂದ ಮಂಗಳವಾರ ಏರ್ಪಡಿಸಿದ್ದ ಮಕ್ಕಳ ಸಹಾಯವಾಣಿ-1098 ದಿನಾಚರಣೆ ಹಾಗೂ ಮಾಸಾಚರಣೆ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಸಮಸ್ಯೆಯಲ್ಲಿರುವಾಗ ಯಾರ ನೆರವು ಕೋರಬೇಕು ಎಂದು ಮಕ್ಕಳಿಗೆ ತಿಳಿದಿರುವುದಿಲ್ಲ. ಅಂತಹ ಸಂದರ್ಭ 1098ಕ್ಕೆ ಉಚಿತ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಎಂದರು.

ಮಕ್ಕಳ ಮೇಲೆ ಎದುರಾಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸಹಕಾರಿಯಾಗಿದೆ. 0 ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳು ತಮಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಮಾತನಾಡಿ, ದುಡಿವ ವರ್ಗದ ಮಕ್ಕಳು ಹೆಚ್ಚಾಗಿ ಇಂತಹ ಸಮಸ್ಯೆಗೆ ಒಳಗಾಗುತ್ತಾರೆ. ಅವರು ಮೂಢನಂಬಿಕೆ ಹಾಗೂ ಸಮಾಜದ ಕಟ್ಟುಪಾಡುಗಳಿಂದ ಹೊರಬಂದಾಗ ಮಾತ್ರ ಸಮಸ್ಯೆಗಳಿಂದ ಪಾರಾಗಬಹುದು ಎಂದು ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಅದರ ನಿವಾರಣೆಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು. ಇದರಿಂದ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಸಾಧ್ಯ ಎಂದರು.

ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗಾಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ವಿಶೇಷ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್, ಸಾಂಸ್ಥಿಕ ಮಕ್ಕಳ ರಕ್ಷಣಾಧಿಕಾರಿ ಹನುಮೇಶ ಅತ್ತನೂರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT