ಸಿಂಧನೂರು: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಥಮ ಬಾರಿಗೆ ಮೈಸೂರು ದಸರಾದ ಮಾದರಿಯಲ್ಲಿ 9 ದಿನದ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದರು.
ನಗರಸಭೆ ಸಭಾಂಗಣದಲ್ಲಿ ಶನಿವಾರ ‘ಸಿಂಧನೂರು ದಸರಾ ಉತ್ಸವ’ದ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ಅ.4 ರಿಂದ 12ರವರೆಗೆ ದಸರಾ ಉತ್ಸವವನ್ನು ಸಿಂಧನೂರಿನಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ಅದ್ದೂರಿಯಾಗಿ ನಡೆಸಲಾಗುವುದು. ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ಶಾಸಕರು ನಡೆಸಿದ್ದಾರೆ. ರಾಯಚೂರಿನ ತಮ್ಮ ಕಚೇರಿಯಲ್ಲಿಯೂ ಈ ಸಂಬಂಧ ಸಭೆ ನಡೆಸಲಾಗಿದೆ ಎಂದರು.
ಈಗಾಗಲೇ ಸಮಿತಿಗಳನ್ನು ರಚಿಸಲಾಗಿದೆ. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೇರಿ ವಿವಿಧ ಜನಪ್ರತಿನಿಧಿಗಳನ್ನು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟದ ವ್ಯವಸ್ಥೆ, ನಿರಂತರ ವಿದ್ಯುತ್ ಸಂಪರ್ಕಕ್ಕೆ ಈಗಾಗಲೇ ಸಂಬಂಧಿಸಿದವರಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾತನಾಡಿ,‘ನಾನು ಮೂಲತಃ ಮೈಸೂರಿನವನು. ತಿಳವಳಿಕೆ ಬಂದಾಗಿನಿಂದ ಮೈಸೂರು ದಸರಾ ನೋಡುತ್ತಾ ಬಂದಿದ್ದೇನೆ. ಸಿಂಧನೂರಿನಲ್ಲಿಯೂ ಅದೇ ಮಾದರಿಯಲ್ಲಿ ಉತ್ಸವ ನಡೆಯಬೇಕು. ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ’ ಎಂದು ಹೇಳಿದರು.
‘ಮುಖ್ಯವಾಗಿ ಸುಗಮ ಸಂಚಾರ, ವಾಹನಗಳ ನಿಲುಗಡೆ ವ್ಯವಸ್ಥೆ, ಪ್ರಮುಖ ವೃತ್ತಗಳಲ್ಲಿ ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆಗೆ ಕ್ರಮ. ಸಿಗ್ನಲ್ ಜಂಪ್ ಮಾಡಿದರೆ ವಾಹನ ಸವಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಸಿಂಧನೂರು ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ,‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.4ರಂದು ಸಿಂಧನೂರಿಗೆ ಆಗಮಿಸಲಿದ್ದು, ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸರ್ಕಾರಿ ಮಹಾವಿದ್ಯಾಲಯದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. 9 ದಿನ ಆರ್‌ಜಿಎಂ ಶಾಲಾ ಆವರಣ, ಟೌನ್‌ಹಾಲ್‌ಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕಗಳು, ನೃತ್ಯ ರೂಪಕಗಳು, ಕೃಷಿ ಕುರಿತ ಗೋಷ್ಠಿಗಳು ನಡೆಯಲಿವೆ’ ಎಂದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿದರು.
ತಹಶೀಲ್ದಾರ್ ಅರುಣ ಎಚ್.ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಉಪಸ್ಥಿತರಿದ್ದರು. ನಗರಸಭೆ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ಪಾಲ್ಗೊಂಡಿದ್ದರು.
‘ಅಂಬಾದೇವಿ ಮೂರ್ತಿ ಮೆರವಣಿಗೆ’
ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ದೇವೇಂದ್ರಗೌಡ ಮಾತನಾಡಿ‘ಅ.5ರಂದು ಸಾಂಸ್ಕೃತಿಕ ದಸರಾ 6ರಂದು ನೌಕರರ ದಸರಾ 7ರಂದು ಮಹಿಳಾ ದಸರಾ 8ರಂದು ರೈತ ದಸರಾ 9ಕ್ಕೆ ಕ್ರೀಡಾ ಹಾಗೂ ಆರೋಗ್ಯ ದಸರಾ 10ಕ್ಕೆ ಕಲಾ ದಸರಾ 11ಕ್ಕೆ ಯುವ ದಸರಾ 12ರಂದು ಸೌಹಾರ್ದ ದಸರಾ ನಡೆಯಲಿದೆ’ ಎಂದು ಮಾಹಿತಿ ನೀಡಿದರು. ಕೊನೆಯ ದಿನವಾದ ಅ.12ರಂದು ತಾಲ್ಲೂಕಿನ ಸುಕ್ಷೇತ್ರ ಅಂಬಾದೇವಿಯ ಪಂಚಲೋಹದ ಮೂರ್ತಿಯನ್ನು ಅಂಬಾರಿಯ ಮೇಲಿಟ್ಟು ತಹಶೀಲ್ದಾರ್ ಕಚೇರಿಯಿಂದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲಾಗುವುದು. ನಂತರ ಸುಕಾಲಪೇಟೆ ರಸ್ತೆಯಲ್ಲಿರುವ ಬನ್ನಿಮಹಾಕಾಳಿ ದೇವಸ್ಥಾನದಲ್ಲಿ ಸಾರ್ವಜನಿಕವಾಗಿ ಬನ್ನಿ ಮುಡಿಯಲಾಗುವುದು ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.