ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಸಭಾಂಗಣ ನಿರ್ಮಾಣ ಕಾಮಗಾರಿ ಅಪೂರ್ಣ

ಮಾನ್ವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
Last Updated 12 ಮಾರ್ಚ್ 2020, 19:30 IST
ಅಕ್ಷರ ಗಾತ್ರ

ಮಾನ್ವಿ:ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣ ನಿರ್ಮಾಣ ಕಾಮಗಾರಿ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.

ಅನುದಾನ ಕೊರತೆಯಿಂದ ಈ ಕಾಮಗಾರಿ ಅಪೂರ್ಣಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2014-15ನೇ ಸಾಲಿನಲ್ಲಿ ₹ 51ಲಕ್ಷ ವೆಚ್ಚದಲ್ಲಿ ಕಾಲೇಜು ಸಭಾಂಗಣಕ್ಕೆ ಮಂಜೂರಾತಿ ದೊರಕಿತ್ತು. ಕಾಮಗಾರಿ ಗುತ್ತಿಗೆ ಪಡೆದಿದ್ದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ.

ಕಾಮಗಾರಿ ವಿಳಂಬಕ್ಕೆ ಅನುದಾನ ಕೊರತೆ ಕಾರಣ ಎನ್ನಲಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು ಈ ಕುರಿತು ಗಮನಹರಿಸಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ₹ 1ಕೋಟಿ ರೂಪಾಯಿ ವೆಚ್ಚದಲ್ಲಿ 5 ಕೊಠಡಿಗಳ ನಿರ್ಮಾಣ ಕಾಮಗಾರಿ ಕೂಡ ಅಪೂರ್ಣಗೊಂಡಿದೆ.

ಕಾಲೇಜಿನಲ್ಲಿ ಈ ಹಿಂದೆ ಮಂಜೂರಾಗಿರುವ ಕಾಮಗಾರಿಗಳು ಅಪೂರ್ಣಗೊಂಡಿದ್ದರೂ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ₹ 1.15 ಕೋಟಿ ವೆಚ್ಚದಲ್ಲಿ ಪ್ರಯೋಗಾಲಯ ಮತ್ತು ಹೆಚ್ಚುವರಿ ಕೊಠಡಿಗಳ ನಿರ್ಮಾಣ. ಕೆಕೆಆರ್‌ಡಿಬಿ ವತಿಯಿಂದ 1ಕೋಟಿ ವೆಚ್ಚದಲ್ಲಿ 6 ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.

ಕಾಲೇಜಿನಲ್ಲಿ ಕೇವಲ ಹೆಚ್ಚುವರಿ ಕೊಠಡಿಗಳ ಮಂಜೂರಾತಿಗೆ ಆದ್ಯತೆ ನೀಡುವ ಅಧಿಕಾರಿಗಳು ಸಭಾಂಗಣ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಗಮನಹರಿಸುತ್ತಿಲ್ಲ. ಕಾಲೇಜಿನಲ್ಲಿ ಸಭೆ, ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸುಸಜ್ಜಿತ ಸಭಾಂಗಣದ ನಿರ್ಮಾಣ ಅತ್ಯಗತ್ಯವಾಗಿದೆ. ಸಭಾಂಗಣ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂಬುದು ವಿದ್ಯಾರ್ಥಿಗಳ ಮನವಿ.

ಕ್ಯಾಷುಟೆಕ್ ಸಂಸ್ಥೆಯ ಅಧಿಕಾರಿಗೆ ನಿರ್ಮಿತಿ ಕೇಂದ್ರದ ಪ್ರಬಾರ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯ ಹೊಣೆ ನೀಡಲಾಗಿತ್ತು. ನಿರ್ಮಿತಿ ಕೇಂದ್ರದ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಕಾಯಂ ಅಧಿಕಾರಿ ಇಲ್ಲದೆ ಖಾಲಿ ಇದ್ದ ಕಾರಣ ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಹಲವು ಕಾಮಗಾರಿಗಳು ಅಪೂರ್ಣಗೊಳ್ಳಲು ಕಾರಣ ಎಂದು ತಿಳಿದು ಬಂದಿದೆ.

ನಿರ್ಮಿತಿ ಕೇಂದ್ರದ ಜಿಲ್ಲಾ ಯೋಜನಾ ವ್ಯವಸ್ಥಾಪಕರಾಗಿ ಕೃಷ್ಣ ಎಂಬುವವರು ಈಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ತಾಲ್ಲೂಕಿನಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT