ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಮಹಿಳಾ ಘಟಕದಿಂದ ಪ್ರತಿಭಟನೆ

Last Updated 8 ಸೆಪ್ಟೆಂಬರ್ 2021, 14:10 IST
ಅಕ್ಷರ ಗಾತ್ರ

ರಾಯಚೂರು: ದೇಶದಲ್ಲಿ ಅಗತ್ಯ ವಸ್ತುಗಳು ಹಾಗೂ ಇಂಧನ ದರ ಏರಿಕೆ ಆಗುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ತರಕಾರಿ ಹಾರ ಧರಿಸಿಕೊಂಡು, ಅಡುಗೆ ಅನಿಲ ಮಾದರಿಗಳನ್ನು ಪ್ರದರ್ಶಿಸಿದರು. ನಗರ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಕೆಲಕಾಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ, ಮಧ್ಯಮ ವರ್ಗದವರಿಗೆ ಜೀವನ ನಡೆಸಲು ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಎರಡು ವರ್ಷ ಕೋವಿಡ್‌ನಿಂದಾಗಿ ಜನರೆಲ್ಲರೂ ತತ್ತರಿಸಿದ್ದಾರೆ. ಇನ್ನೂ ಚೇತರಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಇಂಥ ಸನ್ನಿವೇಶದಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಬಡವರು, ಕೆಳ ಮಧ್ಯಮ ವರ್ಗದವರು ಜೀವನ ನಡೆಸುವುದು ದುಸ್ತರವಾಗಿದೆ. ಕಾಂಗ್ರೆಸ್ ಸರ್ಕಾರವು ಆಡಳಿತ ನಡೆಸುತ್ತಿದ್ದ ಅವಧಿಯಲ್ಲಿ ಪೆಟ್ರೋಲ್ ಬೆಲೆ ₹60, ಡೀಸೆಲ್ ಬೆಲೆ ₹55 ಅಡುಗೆ ಹಾಗೂ ಅನಿಲ ದರ ₹414 ಇತ್ತು. ಬಿಜೆಪಿ ಸರ್ಕಾರವು ಅಧಿಕಾರ ವಹಿಸಿಕೊಂಡ ಬಳಿಕ ಪೆಟ್ರೋಲ್ ₹112, ಡೀಸೆಲ್ ₹100 ಹಾಗೂ ಅಡುಗೆ ಅನಿಲ ದರ ₹934ಕ್ಕೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರೊಂದಿಗೆ ವಿದ್ಯುತ್ ದರವು ಏರಿಕೆ ಆಗುತ್ತಿರುವುದರಿಂದ ರೈತರಿಗೆ, ಬಡವರಿಗೆ ಸಮಸ್ಯೆಯಾಗಿದೆ ಎಂದು ದೂರಿದರು.

ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷ ನಿರ್ಮಲಾ ಬೆಣ್ಣೆ, ಶ್ರೀದೇವಿನಾಯಕ, ಶಶಿಕಲಾ ಭೀಮರಾಯ, ಈರಮ್ಮ, ವಂದನಾ, ಪದ್ಮಾ, ನವಿತಾ, ರಜೀಯಾ ಪಟೇಲ್, ರಾಣಿ ರಿಚರ್ಡ್, ಮಾಲಾ ಭಜಂತ್ರಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT