ಶುಕ್ರವಾರ, ಜೂನ್ 25, 2021
21 °C
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಸೂಚನೆ

ಕೋವಿಡ್‌ ಕೇರ್‌ ಸೆಂಟರ್‌ಗೆ ಸೋಂಕಿತರ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮನೆಗಳಲ್ಲಿ ಐಸೋಲೇಷನ್‌ನಲ್ಲಿ ಇರುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ನಿರ್ವಹಣೆ ಕುರಿತು ಶುಕ್ರವಾರ ಸಭೆ ನಡೆಸಿದರು.

ಕೋವಿಡ್ ಸೋಂಕಿನ ಎರಡನೇ ಅಲೆಯ ಸಂಪರ್ಕವನ್ನು ಕಡಿತ ಮಾಡಬೇಕು. ಇಲ್ಲವಾದರೆ ಮುಂದೆ ಇನ್ನೂ ಅಪಾಯವಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಹೋಂ ಐಸೋಲೇಷನ್ ಇರುವವರ ಮನವೊಲಿಸಿ, ಕೂಡಲೇ ಅವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಒಂದು ವೇಳೆ ಈ ಉಚಿತ ಸೌಲಭ್ಯ ಪಡೆಯದೇ ತಾವೇ ಹಣ ಪಾವತಿಸಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಬಯಸುವವರಿಗೆ ಜಿಲ್ಲೆಯ ಲಾಡ್ಜ್‌ಗಳು ಅಥವಾ ಹೊಟೇಲ್‌ಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ರಾಯಚೂರು ತಾಲ್ಲೂಕಿನಲ್ಲಿ 2 ಸಾವಿರ ಹಾಸಿಗೆಗಳು ಸೇರಿದಂತೆ ಉಳಿದ ತಾಲ್ಲೂಕುಗಳಲ್ಲಿ ತಲಾ 500 ಹಾಸಿಗೆಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್‌ಗಳನ್ನು ಕೂಡಲೇ ಆರಂಭಿಸಬೇಕು. ಆ ಕೇಂದ್ರಗಳಲ್ಲಿ ಸ್ಪಚ್ಛತೆಗೆ ಆದ್ಯತೆ ನೀಡಬೇಕು. ಪ್ರತಿದಿನ ಎರಡು ಬಾರಿ ಶೌಚಾಲಯಗಳನ್ನು ಸ್ಪಚ್ಚ ಮಾಡಬೇಕು. ಶುಚಿ ಹಾಗೂ ರುಚಿಯಾದ ಊಟ ಹಾಗೂ ಉಪಹಾರ, ಕುಡಿಯುವ ನೀರಿನ ಪೂರೈಕೆ ಮಾಡಬೇಕು. ಔಷದೋಪಚಾರಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಒಂದು ಆಂಬುಲೆನ್ಸ್ ಅಲ್ಲಿರಬೇಕು. ಆಕ್ಸಿಜನ್ ಸಿಲಿಂಡರ್‌ಗಳು ಇರಬೇಕು. ಈ ಎಲ್ಲಾ ವ್ಯವಸ್ಥೆಗಳು ಮುಂದಿನ ಎರಡು ದಿನದೊಳಗೆ ಆಗಬೇಕು. ರಾಜ್ಯದಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಈ ಬಾರಿ ಮತ್ತೊಮ್ಮೆ ಲಾಕ್‌ಡೌನ್ ಹೇರಲಾಗುತ್ತಿದೆ. ಜೀವನೋಪಾಯಕ್ಕೆ ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಬೆಳಗಿನ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗುವುದು ಎಂದರು.

ಶಾಸಕ ಡಾ. ಶಿವರಾಜ ಪಾಟೀಲ್ ಮಾತನಾಡಿ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸ್ಪಚ್ಛತೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಊಟ ಹಾಗೂ ಉಪಹಾರವನ್ನು ರೋಗಿಗಳ ಸಂಬಂಧಿಕರು ಹೊರಗಿನಿಂದ ತಂದು ಕೊಟ್ಟಲ್ಲಿ ಅದನ್ನು ರೋಗಿಗಳಿಗೆ ತಲುಪಿಸುವ ಉತ್ತಮ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಮಾತನಾಡಿ, ಉಪ ಮುಖ್ಯಮಂತ್ರಿಗಳ ಸೂಚನೆಗಳಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರೀಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಲಿಂಗಸೂಗೂರು ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್‌ ಮೂಲಕ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು