ಸೋಮವಾರ, ಆಗಸ್ಟ್ 2, 2021
23 °C
ಮಹಾ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

‘ಆದ್ಯತಾ ಗುಂಪಿನವರಿಗೆ ಲಸಿಕೆ; ಶೇ 51 ಸಾಧನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ 45 ವರ್ಷ ಮೇಲ್ಪಟ್ಟವರು ಹಾಗೂ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ 18 ವರ್ಷದಿಂದ 44 ವರ್ಷದೊಳಗಿನ ವಯೋಮಾನದವರ ಆದ್ಯತಾ ಗುಂಪಿನ ಲಸಿಕೆ ಅಭಿಯಾನವು ಜಿಲ್ಲೆಯಲ್ಲಿ ಶೇ 51 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದರು.

ನಗರದ ರಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್ ಲಸಿಕೆ ನೀಡುವ ಕುರಿತಂತೆ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ. ಅದರಂತೆ ಆದ್ಯತೆ ಗುಂಪುಗಳು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ನಿಯಮಾನುಸಾರ ಜಿಲ್ಲೆಯಾದ್ಯಂತ ಲಸಿಕೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 4 ಲಕ್ಷ 32 ಸಾವಿರ ಜನರು 45 ವರ್ಷ ಮೇಲ್ಪಟ್ಟವರಿದ್ದಾರೆ. ಅವರಲ್ಲಿ ಈಗಾಗಲೇ 2 ಲಕ್ಷ 21 ಸಾವಿರ ಜನರಿಗೆ ಈಗಾಗಲೇ ಲಸಿಕೆ ನೀಡುವ ಮೂಲಕ ಶೇ 51 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಇನ್ನು 18 ವರ್ಷದಿಂದ 44 ವರ್ಷದೊಳಗಿನ 9 ಲಕ್ಷ 49 ಸಾವಿರ ಜನರಿದ್ದು, ಈಗಾಗಲೇ ವಿಕಲಚೇತರು, ಮಂಗಳಮುಖಿಯರು, ಎಪಿಎಂಸಿ ಹಮಾಲರು, ಆರೋಗ್ಯ ಇಲಾಖೆಯ ಸಿಬ್ಬಂದಿ ಕುಟುಂಬಸ್ಥರು, ಪೊಲೀಸ್ ಇಲಾಖೆ ಸಿಬ್ಬಂದಿ ಕುಟುಂಬಸ್ಥರು, ಜೆಸ್ಕಾಂ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಕುಟುಂಬಸ್ಥರು ಸೇರಿದಂತೆ ಆದ್ಯತೆ ಗುಂಪಿನಲ್ಲಿ ಕಾರ್ಯನಿರ್ವಹಿಸುವ 67,280 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಇದು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ ಏಕಕಾಲಕ್ಕೆ ಅಭಿಯಾನ ಆರಂಭಗೊಂಡಿದ್ದು, 20 ರಿಂದ 25 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 45 ಸಾವಿರ ವೈಫಲ್ಯಗಳಷ್ಟು ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ನಿಯಮಾನುಸಾರ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ್ ಪಿರಾಪುರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಂಕರ್, ಆರ್‌ಸಿಎಚ್ ಅಧಿಕಾರಿ ಡಾ. ವಿಜಯ ಸೇರಿದಂತೆ ರಿಮ್ಸ್ ಹಾಗೂ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು