ಗುರುವಾರ , ಆಗಸ್ಟ್ 5, 2021
21 °C
ಜಿಲ್ಲಾ ಮಟ್ಟದ ಮರಳು ಸಮಿತಿ ಸಭೆ

ಅಕ್ರಮ ಮರಳಿಗೆ ದಂಡ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ರಾಜಧನ ಪಡೆಯದೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಿದ್ದಲ್ಲಿ ಪ್ರತಿ ಟನ್‌ಗೆ ₹3 ಸಾವಿರ ದಂಡ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಹೊಸ ಮರಳು ನೀತಿಯ ಮಾರ್ಗಸೂಚಿ ಪ್ರಕಾರ, ಪ್ರತಿ ಟನ್‌ಗೆ ದಂಡ ವಸೂಲಿ ಮಾಡುವಂತೆ ಸೂಚಿಸಲಾಗಿದೆ. ಸರ್ಕಾರದ ಆದೇಶ ಅನುಸಾರವಾಗಿ ದಂಡ ವಸೂಲಿ ಮಾಡಿ, ತಪ್ಪಿತಸ್ತರ ವಿರುದ್ದ ಪ್ರಕರಣ ದಾಖಲಿಸಿ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಹಲವು ದೂರುಗಳು ಇರುವುದರಿಂದ ದಂಡದ ಪ್ರಮಾಣ ಹೆಚ್ಚಳ ಮಾಡಲಾಗಿದೆ. 14 ಚಕ್ರವುಳ್ಳ ಲಾರಿಯಲ್ಲಿ 25 ಟನ್, 10 ಚಕ್ರವುಳ್ಳದಲ್ಲಿ 18 ಟನ್ ಮತ್ತು 12 ಚಕ್ರವುಳ್ಳ 22 ಟನ್ ಮರಳು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳಿಂದ ದೃಢೀಕರಣ ಪತ್ರ ಪಡೆದುಕೊಳ್ಳಬೇಕು. ಇದಕ್ಕಿಂತ ಹೆಚ್ಚಾಗಿ ಸಾಗಾಣಿಕೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾತ್ರಿ ವೇಳೆ ಮರಳು ಸಾಗಾಣಿಕೆ ಮಾಡುವುದು ಸಂಪೂರ್ಣ ನಿಷೇಧಿಸಲಾಗಿದೆ. ಬೆಳಿಗ್ಗೆಯಿಂದ ರಾತ್ರಿ 9 ಗಂಟೆಯೊಳಗೆ ಮಾತ್ರ ಮರಳು ಸಾಗಾಣಿಕೆ ಮಾಡಬೇಕು. ಟಿಪ್ಪರ್, ಲಾರಿ ಹಾಗೂ ಟ್ರ್ಯಾಕ್ಟರ್‌ಗಳಲ್ಲಿ ಓವರ್ ಲೋಡ್ ಮರಳು ಸಾಗಿಸಬಾರದು. ರಾಯಚೂರು ತಾಲ್ಲೂಕಿನ ಕಾಡ್ಲೂರು, ಮಾನ್ವಿ ತಾಲೂಕಿನ ಚೀಕಲಪರ್ವಿ, ದೇವದುರ್ಗ ತಾಲೂಕಿನ ಕೃಷ್ಣ ನದಿ ಬಳಿಯಿರುವ ಮರಳು ಸಂಗ್ರಹ ಕೇಂದ್ರಗಳಿಂದ ಮರಳು ಸಾಗಿಸಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಅನುಮತಿ ಪಡೆಯದೇ ಮರಳು ಸಂಗ್ರಹಿಸಿರುವುದ ಕಂಡುಬಂದಲ್ಲಿ ಅಂಥವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿರುವವರ ಮೇಲೆ ನಿಗಾವಹಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕು ತಹಶೀಲ್ದಾರರು ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭಿಸುವ ಮೂಲಕ ಚೆಕ್‌ಪೋಸ್ಟ್‌ಗಳಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಪರಿಶೀಲಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ರಾಯಚೂರು ಉಪವಿಭಾಗಾಧಿಕಾರಿ ಸಂತೋಷ್ ಕಾಮಗೌಡ, ಲಿಂಗಸೂಗೂರು ಉಪವಿಭಾಗಾಧಿಕಾರಿ ರಾಜಶೇಖರ್ ಡಂಬಳ, ತಹಶೀಲ್ದಾರ್‌ ಡಾ.ಹಂಪಣ್ಣ, ಹಿರಿಯ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂ.ವಿಶ್ವನಾಥ, ತಹಶೀಲ್ದಾರರು, ಸಾರಿಗೆ ಅಧಿಕಾರಿಗಳು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು