ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೌರ್ಜನ್ಯಕ್ಕೊಳಗಾದ ಮಹಿಳೆಗೆ ಶೀಘ್ರ ಪರಿಹಾರ’

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜಿಲ್ಲಾಮಟ್ಟದ ಸಮಿತಿ ಸಭೆ
Last Updated 21 ಡಿಸೆಂಬರ್ 2019, 13:55 IST
ಅಕ್ಷರ ಗಾತ್ರ

ರಾಯಚೂರು:ಕೌಟುಂಬಿಕ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ದೌರ್ಜನ್ಯಕ್ಕೊಳಗಾದ ಮಹಿಳೆಗೆ ಶೀಘ್ರ ಪರಿಹಾರ ಬಿಡುಗಡೆ ಮಾಡುವುದಕ್ಕೆ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ₹25 ಸಾವಿರ ಪರಿಹಾರ ನೀಡಬೇಕು. ಒಂದು ವೇಳೆ ಇಂಥ ಘಟನೆಯಲ್ಲಿ ಮೃತಪಟ್ಟಿದ್ದರೆ ಅಂಥವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ನೀಡಬೇಕು. ಆ್ಯಸಿಡ್‌ ದಾಳಿ ನಡೆದಿರುವ ಪ್ರಕರಣಗಳಲ್ಲಿ ಮಹಿಳೆಗೆ ₹3 ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ‘ಸ್ಥೈರ್ಯ’ ಹೆಸರಿನ ಯೋಜನೆ ಇದ್ದು, ಅದರಡಿ ಸಕಾಲಕ್ಕೆ ಪರಿಹಾರ ತಲುಪಿಸುವ ಕಾರ್ಯ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ನೊಂದವರಿಗೆ ಕೂಡಲೇ ನೆರವಾಗಬೇಕು. ನೋವಿಗೆ ಸ್ಪಂದಿಸಿ ಪರಿಹಾರ ಒದಗಿಸಬೇಕು. ಪ್ರಕರಣಗಳು ನಡೆದಿರುವುದು ಗೊತ್ತಾದರೆ, ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೀರನಗೌಡ ಮಾತನಾಡಿ, ಏಪ್ರಿಲ್‌ನಲ್ಲಿ 53 ಪ್ರಕರಣಗಳು ದಾಖಲಾಗಿದ್ದವು. ಇಲ್ಲಿಯವರೆಗೂ ಒಟ್ಟು 75 ಪ್ರಕರಣಗಳಾಗಿವೆ. ಪರಿಹಾರ ಧನ ಸರ್ಕಾರದಿಂದ ಒಟ್ಟು ₹10.26 ಕೋಟಿ ಬಿಡುಗಡೆಯಾಗಿತ್ತು. ಸದ್ಯ 18 ಪ್ರಕರಣಗಳು ನ್ಯಾಯಾಲಯದಲ್ಲಿವೆ. ರಾಯಚೂರು ತಾಲ್ಲೂಕಿನಲ್ಲಿ ಅತಿಹೆಚ್ಚು 31 ಪ್ರಕರಣಗಳಾಗಿವೆ ಎಂದರು.

ಜಿಲ್ಲಾಧಿಕಾರಿ ವೆಂಕಟೇಶಕುಮಾರ್‌ ಮಾತನಾಡಿ, ಪೊಲೀಸ್‌ ಇಲಾಖೆಯ ಸಮನ್ವಯದೊಂದಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನ್ಯಾ. ಎಂ.ಸಿ.ನಾಡಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ದೇವದಾಸಿ ಮಹಿಳೆಯರ ಪುನರ್ವಸತಿ ಅಧಿಕಾರಿ ಗೋಪಾಲನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT