ಶನಿವಾರ, ಜನವರಿ 25, 2020
28 °C
ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಸಭೆ

ರಾಯಚೂರು: ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲೆ ಎಸಗಿದ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಕಲ್ಪಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಳಂಬಕ್ಕೆ ಆಸ್ಪದ ನೀಡಬಾರದು. ದೌರ್ಜನ್ಯಕ್ಕೊಳಗಾದ ಮಹಿಳೆ ಅಥವಾ ಬಾಲಕಿ ದೂರು ನೀಡಿದ ಕೂಡಲೇ ಎಫ್‌ಐಆರ್ ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಸ್ಮಶಾನಕ್ಕಾಗಿ ಸ್ಥಳವನ್ನು ಗುರುತಿಸಬೇಕು. ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದರೆ, ಖಾಸಗಿಯವರಿಂದ ಜಮೀನು ಖರೀದಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಆಯಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಈ ಜನಾಂಗದವರಿಗೆ ರುದ್ರಭೂಮಿ ಇರುವ ಬಗ್ಗೆ ಅಥವಾ ಇಲ್ಲದಿರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವರದಿ ನೀಡುವಂತೆ ತಾಕೀತು ಮಾಡಿದರು.

ರಾಯಚೂರು ತಾಲ್ಲೂಕಿನ ಬೋಳಮಾನದೊಡ್ಡಿ ರಸ್ತೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ರುದ್ರಭೂಮಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕು. ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ 40ಕ್ಕೂ ಮೇಲ್ಪಟ್ಟ ಗ್ರಾಮಗಳ ಮಾಹಿತಿಯನ್ನು ತಾಲ್ಲೂಕುವಾರು ಒದಗಿಸುವಂತೆ ಸೂಚನೆ ನೀಡಿದರು.

2019ರಲ್ಲಿ 65 ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 56 ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ, 9 ಪ್ರಕರಣಗಳು ಬಾಕಿ ಇವೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಬ್ರಮಣ್ಯ ಅವರು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ್, ತಹಸೀಲ್ದಾರ್ ಹಂಪಣ್ಣ, ಡಿಒಎಸ್‌ಪಿ ಶೀಲವಂತ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ರಾಜೇಂದ್ರ ಜಲ್ದಾರ್, ಮಂಗಳ ಹೆಗಡೆ ಸೇರಿದಂತೆ ಸಮಿತಿಯ ಸದಸ್ಯರು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು