ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಹೈ ಆಲರ್ಟ್‌ಗೆ ಡಿಸಿ ಸೂಚನೆ

Last Updated 16 ಜುಲೈ 2020, 17:14 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಾದ್ಯಂತ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸೋಂಕು ಹರಡದಂತೆ ನಿಯಂತ್ರಿಸಲು ಕಟ್ಟೆಚ್ಚರ ವಹಿಸಬೇಕು ಮತ್ತು ಅಧಿಕಾರಿಗಳು ಹೈ ಆಲರ್ಟ್ ಆಗಿರಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಹಾಲ್‌ನಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಯುವ ಕುರಿತು ತಾಲ್ಲೂಕು ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿದರು.

ರಾಯಚೂರು, ಮಾನ್ವಿ, ಸಿಂಧನೂರು, ಲಿಂಗಸೂಗೂರು ಮತ್ತು ದೇವದುರ್ಗ ತಾಲ್ಲೂಕಿನಲ್ಲಿ ಒಂದೇ ದಿನ ಅತ್ಯಧಿಕ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸೋಂಕಿತರಿಗೆ ಚಿಕಿತ್ಸೆ, ಔಷಧಿ, ಆಹಾರ ಸೇರಿದಂತೆ ಎಲ್ಲ ಸೌಲಭ್ಯವನ್ನು ಸಮಪರ್ಕವಾಗಿ ಕಲ್ಪಿಸಬೇಕಾಗಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಆಂಬ್ಯುಲೆನ್ಸ್‌ಗಳ ಕೊರತೆಯಾಗದಂತೆ ನಿಗಾವಹಿಸಬೇಕು. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸ್ಥಳದಲ್ಲಿಯೇ ಇರಬೇಕು ಎಂದು ತಿಳಿಸಿದರು.

ಮಾನ್ವಿ ತಾಲ್ಲೂಕಿನಲ್ಲಿ ಒಂದೇ ದಿನ 30ಕ್ಕೂ ಅಧಿಕ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರನ್ನು ಪತ್ತೆಹಚ್ಚಿ ಅವರನ್ನು ತಕ್ಷಣವೇ ರಿಮ್ಸ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ಗೆ ಸ್ಥಳಾಂತರಿಸಬೇಕು. ಆಸ್ಪತ್ರೆಗಳಲ್ಲಿ ಎಕ್ಸರೇ, ಇಸಿಜಿಯಂತಹ ಸಲಕರಣೆಗಳು ಸುಸ್ಥಿತಿಯಲ್ಲಿರಬೇಕು. ಇಲ್ಲದಿದ್ದರೆ ಹೊಸದಾಗಿ ಅವರನ್ನು ಖರೀದಿಸುವಂತೆ ತಹಶೀಲ್ದಾರರು‌ ಹಾಗೂ ಆರೋಗ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.

ಸಿರವಾರ ತಹಶೀಲ್ದಾರ್‌ ಶೃತಿ ಮಾತನಾಡಿ, ಸಿರವಾರ ತಾಲ್ಲೂಕಿನಲ್ಲಿ ಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಆ ಸೋಂಕಿತರನ್ನು ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದರು.

ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ನಾಲ್ಕು ದಿನಗಳಿಂದ ಆರೋಗ್ಯ ಅಧಿಕಾರಿಗಳು ಕರ್ತವ್ಯಕ್ಕೆ ಬಾರದೆ ಗೈರು ಹಾಜರಾಗುತ್ತಿದ್ದಾರೆಂದು ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಿ, ಅವರನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಡಿವೈಎಸ್‌ಪಿ ಶಿವನಗೌಡ ಪಾಟೀಲ, ತಹಶೀಲ್ದಾರ್‌ ಡಾ.ಹಂಪಣ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ರಿಮ್ಸ್ ನಿದೇಶಕ ಡಾ.ಬಸವರಾಜು ಪೀರಾಪುರ, ಡಾ.ಸುರೇಂದ್ರ ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT