ಬುಧವಾರ, ಜುಲೈ 28, 2021
26 °C
ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಸೂಚನೆ

ಕೆರೆ ಒತ್ತುವರಿ ಮಾಡಿದವರ ವಿರುದ್ದ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಿ, ಅವುಗಳನ್ನು ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಡದ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೊದಲಿಗೆ ಜಿಲ್ಲೆಯಲ್ಲಿನ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವವರನ್ನು ಗುರುತಿಸಬೇಕು. ಆನಂತರ ಅವುಗಳ ಒತ್ತುವರಿಯನ್ನು ತೆರವುಗೊಳಿಸಿ ಹದ್ದುಬಸ್ತು ಮಾಡಿ ಕೆರೆಗಳನ್ನು ಸಂರಕ್ಷಿಸಬೇಕು. ಪ್ರತಿಯೊಬ್ಬರಿಗೆ ನೀರಿನ ಮಹತ್ವ ತಿಳಿಸುವ ಕೆಲಸ ಮಾಡಬೇಕು. ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರ, ನಗರಾಭಿವೃದ್ಧಿ ಕೋಶ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಕೆರೆಗಳನ್ನು ಗುರುತಿಸಿ ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೆರೆಗಳು ಒತ್ತುವರಿಯಾಗದಂತೆ ತಡೆಗಟ್ಟಲು ಅವುಗಳ ಸುತ್ತಲೂ ಬೇಲಿ ಹಾಕಬೇಕು. ಗಿಡಗಳನ್ನು ಬೆಳೆಸಬೇಕು. ಜಿಲ್ಲೆಯಲ್ಲಿ 300 ಅಧಿಕ ಕೆರೆಗಳ ಪೈಕಿ ಇದೂವರೆಗೆ ಅಭಿವೃದ್ದಿ ಪಡಿಸಿದ ಕೆರೆಗಳ ಮಾಹಿತಿಯನ್ನು ಸಣ್ಣ ನೀರಾವರಿ ಇಲಾಖೆ ಕೊಡಬೇಕು ಎಂದರು.

ಕಾರ್ಯನಿರ್ವಾಹಕ ಎಂಜಿನಿಯರ್‌ ವಿನೋದ್ ಕುಮಾರ್ ಗುಪ್ತ ಅವರು ಸಣ್ಣ ಕೆರೆ ಅಭಿವೃದ್ಧಿ ಕುರಿತು ಅಸಮರ್ಪಕ ಉತ್ತರ ನೀಡಿದ್ದರಿಂದ, ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಸಭೆಗೆ ಹಾಜರಾಗುವಾಗ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಆಗಮಿಸಬೇಕು. ಹಾರಿಕೆ ಉತ್ತರ ನೀಡಿದರೆ ಸೂಕ್ತ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮೀಣಾಭಿವೃದ್ಧಿ ಎಂಜಿನಿಯರಿಂಗ್ ವಿಭಾಗದ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಗುರುತಿಸಿ, ಅಭಿವೃದ್ದಿ ಪಡಿಸಬೇಕು. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡಿಸಿ, ಒತ್ತುವರಿಯಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಕೆರೆಗಳ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಗಿಡಗಳನ್ನು ಉಚಿತವಾಗಿ ಪಡೆದು ಬೆಳೆಸಿದಾಗ ಕೆರೆಯ ಗಡಿ ಗುರುತಾಗುತ್ತದೆ. ಇದರಿಂದ ಯಾರು ಒತ್ತುವರಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಕಟ್ಳೆಟ್ಕೂರು, ಮರ್ಚೆಡ್ ಗ್ರಾಮಗಳಲ್ಲಿ ಬಿಜೆಎಸ್‌ನಿಂದ ಕೆರೆಗಳ ಹೊಳು ತೆಗೆದು ಅಭಿವೃದ್ಧಿ ಪಡಿಸಲಾಗಿದೆ. ಅಂತರ್ಜಲ ವೃದ್ಧಿಸಲು ಕೆರೆಗಳನ್ನು ಸಂರಕ್ಷಣೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ನೀರಿನ ಮಹತ್ವ ಅರಿತಿಕೊಂಡಾಗ ಮಾತ್ರ ಕೆರೆಗಳನ್ನು ಸಂರಕ್ಷಣೆ ಮಾಡಲು ಸಾಧ್ಯ. ನಗರದ ಮಾವಿನಕೆರೆ, ಮನ್ಸಲಾಪುರು, ಮರ್ಚೆಡ್ ಕೆರೆಗಳಲ್ಲಿ ಚರಂಡಿ ನೀರು ಸಂಗ್ರಹವಾಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರುಗೇಶ, ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ವಿನೋದ ಕುಮಾರ್ ಗುಪ್ತಾ, ಸಣ್ಣ ನೀರಾವರಿ ಇಲಾಖೆಯ ತಾಂತ್ರಿಕ ಸಹಾಯಕ ಮಾರುತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು