ಭಾನುವಾರ, ಜೂನ್ 13, 2021
21 °C
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಸಭೆ

ಪಿಪಿ ಕಿಟ್ ಧರಿಸಿ ವಾರ್ಡ್‌ ಪರಿಶೀಲನೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಅಲ್ಲಿನ ಪರಿಸ್ಥಿತಿ ಸುಧಾರಿಸಲು ಐಎಎಸ್ ವೃಂದದ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿ ನಂತರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್‌) ಕಾಲೇಜು ಮತ್ತು ಆಸ್ಪತ್ರೆಯನ್ನು ಜಿಲ್ಲೆಯ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸ್ಥಾಪಿಸಲಾದ ಸಂಸ್ಥೆ, ಕೋವಿಡ್ ಸಂಕಷ್ಟ ಕಾಲದಲ್ಲಿ ಇದು ರೋಗಿಗಳ ನೆರವಿಗೆ ಬಂದು, ಉತ್ತಮ ಚಿಕಿತ್ಸೆ ನೀಡಿ, ಅವರ ರೋಗವನ್ನು ಗುಣಪಡಿಸಬೇಕು. ಆದರೆ, ರಿಮ್ಸ್ ನಿರ್ದೇಶಕರು ಹಾಗೂ ಅಲ್ಲಿನ ವೈದ್ಯರು ಪೂರಕವಾಗಿ ಸ್ಪಂದಿಸುತ್ತಿಲ್ಲ. ಅಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಮೂರು ಜನರ ಸಮಿತಿ ರಚಿಸಿಕೊಂಡು ಕೊಡಲೇ ಜಿಲ್ಲೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ತೆರಳಿ, ಅಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆದು ಬಿಡುಗಡೆಯಾದವರ ವಿವರ ಹಾಗೂ ಅವರು ಚಿಕಿತ್ಸೆಗೆ ಪಾವತಿಸಿದ ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶಿಸಿದರು.

ಖಾಸಗಿ ಕ್ಲಿನಿಕ್ ಹೊಂದಿರುವ ಸರ್ಕಾರಿ ವೈದ್ಯರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅಷ್ಟು ಸಾಲದು ಅವರನ್ನು
ಬಂಧಿಸಬೇಕು ಎಂಬ ಸೂಚನೆಗಳನ್ನು ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ರಾಯಚೂರು ಉಪವಿಭಾಗಾಧಿಕಾರಿ, ರಿಮ್ಸ್‌ ಶಸ್ತ್ರ ಚಿಕಿತ್ಸಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ರಿಮ್ಸ್ ಕೋವಿಡ್ ಆಸ್ಪತ್ರೆಗೆ ಪಿಪಿ ಕಿಟ್ ಹಾಕಿಕೊಂಡು ಹೋಗಿ ಅಲ್ಲಿನ ವಾರ್ಡ್‌ಗಳ ತಪಾಸಣೆ ನಡೆಸಬೇಕು. ಅಲ್ಲಿನ ರೋಗಿಗಳೊಂದಿಗೆ ಚರ್ಚಿಸಿ, ಅವರಿಗೆ ನೀಡಲಾಗುತ್ತಿರುವ ಔಷಧೋಪಚಾರಗಳು, ಊಟ, ಉಪಹಾರ, ಅವರ ತಪಾಸಣೆಯ ವಿವರಗಳನ್ನು ಪರಿಶೀಲಿಸಿ ವರದಿ ನೀಡಬೇಕು. ಈ ರೀತಿಯಾದಲ್ಲೀ ಯಾವ ವೈದ್ಯರು ಕೆಲಸ ಮಾಡುತ್ತಿದ್ದಾರೆ ಎಂಬುದು ತಿಳಿಯಲಿದೆ ಎಂದರು.

ಅಲ್ಲದೇ ರಿಮ್ಸ್ ಹಾಗೂ ಒಪೆಕ್‌ನಲ್ಲಿರುವ ಕೋವಿಡ್ ಆಸ್ಪತ್ರೆಯ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಬೇಕು. ರೋಗಿಗಳನ್ನು ಭೇಟಿಯಾಗಲು ಆಗಮಿಸುವವರಿಗೆ ಪಾಸ್ ವ್ಯವಸ್ಥೆ ಮಾಡಬೇಕು. ಯಾರಿಗೂ ಅನಾವಶ್ಯಕವಾಗಿ ಪ್ರವೇಶಿಸಲು ಅವಕಾಶ ಮಾಡಿಕೊಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ್ ಹಾಗೂ ಶಾಸಕ ಶಿವನಗೌಡ ನಾಯಕ್ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು