ಭಾನುವಾರ, ಏಪ್ರಿಲ್ 18, 2021
24 °C
ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ.ಎಸ್.ನಸೀರ್ ಹೇಳಿಕೆ

ಡೆಂಗಿ ರೋಗ ನಿಯಂತ್ರಣಕ್ಕೆ ಎಚ್ಚರಿಕೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಪ್ರತಿಯೊಬ್ಬರೂ ಡೆಂಗಿ ರೋಗದ ಲಕ್ಷಣ ಹಾಗೂ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗಣೇಶ ಕೆ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದಿಂದ ಮಂಗಳವಾರ ಏರ್ಪಡಿಸಿದ್ದ ಡೆಂಗಿ ವಿರೋಧಿ ಮಾಸಾಚರಣೆ ನಿಮಿತ್ತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜುಲೈನಲ್ಲಿ ಡೆಂಗಿ ವಿರೋಧಿ ಮಾಸ ಆಚರಿಸಲಾಗುವುದು. ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗಿ ರೋಗದ ಹತೋಟಿಗೆ ಮುಖ್ಯ ವಿಧಾನ. ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ ಬ್ಯಾರಲ್, ಎರ್‌ಕೂಲರ್, ಮಣ್ಣಿನ ಮಡಿಕೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ತಿಕ್ಕಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ಮುಚ್ಚಳದಿಂದ ಭದ್ರವಾಗಿ ಮುಚ್ಚಿಡುವುದು, ಬಯಲಿನಲ್ಲಿರುವ ತ್ಯಾಜ್ಯವಸ್ತುಗಳಾದ ಟಯರ್, ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹಣವಾಗದಂತೆ ಎಚ್ಚರ ವಹಿಸಬೇಕು ಎಂದರು.

ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ, ಸೊಳ್ಳೆ ನಿರೋಧಕಗಳನ್ನು ಬಳಸುವುದು ಹಾಗೂ ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆರೊಗ್ಯ ಕೇಂದ್ರಕ್ಕೆ ಬೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಅತ್ಯುತ್ತಮ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ.ಎಸ್.ನಸೀರ್, ಡೆಂಗಿ ರೋಗ ನಿಯಂತ್ರಣ ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ  ಮತ್ತು ಸಮುದಾಯದ ಅಗತ್ಯತೆಯ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಕ್ಷ್ಮೀಬಾಯಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ ಕೆ. ಹಾಗೂ ಡಾ. ಎಂ.ಎನ್.ನಂದಿತಾ, ತಾಲ್ಲೂಕಾವಾರು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವಾರು ಹಿರಿಯ ಆರೋಗ್ಯ ಸಹಾಯಕರು, ವಿಬಿಡಿ ತಾಂತ್ರಿಕ ಮೇಲ್ವಿಚಾರಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕಾ ಆಶಾ ಮೆಂಟರ್ ಮಹೇಶ ಎಂ. ಹಣಕಾಸು ಸಹಾಯಕರಾದ ಆಂಜನೇಯ್ಯ ಎಚ್. ಮಾನಯ್ಯ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.