ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ: ಶಶೀಲ್‌ ನಮೋಶಿ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ
Last Updated 11 ಸೆಪ್ಟೆಂಬರ್ 2021, 15:02 IST
ಅಕ್ಷರ ಗಾತ್ರ

ರಾಯಚೂರು: ಶಿಕ್ಷಣದಿಂದ ಮಾತ್ರ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್‌ ನಮೋಶಿ ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ 134ನೇ ಜನ್ಮದಿನೋತ್ಸವ ಅಂಗವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಹೊಸ ಶಿಕ್ಷಣ ನೀತಿ ಜಾರಿಗೆ ತರುವುದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಕಳೆದ ಐದು ವರ್ಷಗಳಿಂದ ವಿಶೇಷ ತಜ್ಞರ ತಂಡ ಈ ಹೊಸ ಶಿಕ್ಷಣ ನೀತಿಯನ್ನು ರೂಪಿಸಿದೆ. ಪ್ರೌಢಶಿಕ್ಷಣ, ಪದವಿಪೂರ್ವ ಮತ್ತು ಪದವಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಿಕ್ಷಣ ಕಾಂತಿಯನ್ನು ರೂಪಿಸಲಿದೆ. ಡಾ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಕಾಳಜಿವಹಿಸಿ ನೂತನ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆ ಬದಲಾಗಲಿದೆ ಎಂದರು.

ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ಶಿಕ್ಷಕರಾಗಿ ದೇಶದ ಉಪ ರಾಷ್ಟ್ರಪತಿಯಾಗಿ ದೇಶಕ್ಕೆ ಅನೇಕ ಕೊಡುಗೆ ನೀಡಿ ದೇಶದ ಹಿರಿಮೆ ಹೆಚ್ಚಿಸಿದ್ದಾರೆ. ಅವರ ಸೇವೆ ಎಲ್ಲಾ ಶಿಕ್ಷಕರಿಗೆ ಮಾರ್ಗದರ್ಶಕರಾಗಿದ್ದು, ಇದಕ್ಕಾಗಿಯೇ ಅವರ ಜನ್ಮದಿನದಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಶಿಕ್ಷಕರಿಗೆ ಸಂತಸದ ದಿನವಾಗಿದೆ ಎಂದು ಹೇಳಿದರು.

ಕೋವಿಡ್‌ನಿಂದ ಕಳೆದ ಎರಡು ವರ್ಷಗಳ ಕಾಲ ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಈ ವೇಳೆಯಲ್ಲಿಯೂ ಶಿಕ್ಷಕರು ಆನ್ ಲೈನ್ ಮೂಲಕ ತಮ್ಮ ಸೇವೆ ಮಾಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಸಿಕೆ ಅಭಿಯಾನ ಮಾಡುತ್ತಿದ್ದು ಶಿಕ್ಷಕರು ಸಹಕರಿಸಿ ಯಶಸ್ವಿಗೊಳಿಸಬೇಕು ಎಂದರು.

ಶಾಸಕ ಡಾ. ಶಿವರಾಜ ಪಟೀಲ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆತಾಗ ದೇಶದ ಅಭಿವೃದ್ಧಿ ಆಗಲಿದೆ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾದಂತೆ ಹೊಂದಿಕೊಂಡು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಹಟ್ಟಿ ಚಿನ್ನದ ನಿಗಮ ನಿಗಮದ ಅಧ್ಯಕ್ಷ ಮಾನಪ್ಪ ವಜ್ಜಲ್ ಮಾತನಾಡಿ, ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ಆದರ್ಶ ಶಿಕ್ಷಕರಾಗಿ ಎಲ್ಲಾ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಅವರ ತ್ವಾದರ್ಶಗಳು ಎಲ್ಲಾ ಶಿಕ್ಷಕರು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಶಿಕ್ಷಕರಿಗೆ ಪವಿತ್ರ, ಗೌರವದ ಸ್ಥಾನ ನೀಡಿದ್ದು ಇದನ್ನು ಉಳಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ. ಗೋಪಾಲರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಂ. ವೃಷಭೇಂದ್ರ ಸ್ವಾಮಿ, ಡಯೆಟ್ ಉಪ ನಿರ್ದೇಶಕ ರಾಮಚಂದ್ರ ಶಿವಂಗಿ, ಚಂದ್ರಶೇಖರ ದೊಡ್ಡಮನಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯಕ, ವಯಸ್ಕರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ, ಯಂಕಪ್ಪ ಫಿರಂಗಿ, ಬಸವರಾಜ ಬಾಯಿದೊಡ್ಡಿ, ಮೊಯಿನುಲ್ ಹಕ್, ಪರಶುರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT