ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಉಪ ಕೇಂದ್ರ ಸ್ಥಾಪಿಸಿ: ದಿನೇಶ ಗುಂಡುರಾವ್

ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧಿಕಾರಿಗಳಿಗೆ ಸೂಚನೆ
Published 9 ಆಗಸ್ಟ್ 2023, 6:48 IST
Last Updated 9 ಆಗಸ್ಟ್ 2023, 6:48 IST
ಅಕ್ಷರ ಗಾತ್ರ

ರಾಯಚೂರು: ‘ಜನಸಂಖ್ಯೆಗೆ ಅನುಗುಣವಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉಪ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಹೊರ ವಲಯದ ಯರಮರಸ್ ವಿವಿಐಪಿ ಸರ್ಕ್ಯೂಟ್ ಹೌಸ್‌ನಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಿವೆ. ಒಂದು ಆಸ್ಪತ್ರೆಯ ಕಟ್ಟಡ ಪೂರ್ಣಗೊಂಡಿದೆ. ಎರಡು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿ ನಡೆದಿದೆ. 4 ತಾಲ್ಲೂಕು ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಭಾಗದಲ್ಲಿ ಒಟ್ಟು 50 ಪ್ರಾಥಮಿಕ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಒಟ್ಟು 213 ಉಪ ಕೇಂದ್ರಗಳಿವೆ. ಜನರಿಗೆ ಆರೋಗ್ಯ ಸೇವೆ ಒದಗಿಸುವ ದಿಸೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಉಪ ಕೇಂದ್ರಗಳನ್ನು ಪ್ರಾರಂಭಿಸಬೇಕು’ ಎಂದು ಹೇಳಿದರು.

‘ರಕ್ತದೊತ್ತಡ, ಮಧುಮೇಹ ಕಾಯಿಲೆಗೆ ಸಂಬಂಧಪಟ್ಟಂತೆ ಸರಿಯಾದ ರೀತಿಯಲ್ಲಿ ತಪಾಸಣೆ ನಡೆಯಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳಬೇಕು’ ಎಂದು ಸೂಚಿಸಿದರು.

‘ರಾಯಚೂರು ಜಿಲ್ಲೆ ಮಕ್ಕಳ ಲಿಂಗಾನುಪಾತ ಕಡಿಮೆ ಇದೆ. ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಲಿಂಗತ್ವ ಪರೀಕ್ಷೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಆಸ್ಪತ್ರೆ ಹಾಗೂ ವೈದ್ಯರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆದೇಶ ನೀಡಿದರು.

‘ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಜಿಲ್ಲೆಯ ಪ್ರಸೂತಿ ತಜ್ಞರು ತಾಯಿ ಮಕ್ಕಳ ಆಸ್ಪತ್ರೆಗೆ ಹೋಗಲು ಸಿದ್ಧರಾಗುತ್ತಿಲ್ಲ. ಇಲಾಖೆಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಕಾಯಂ ವೈದ್ಯರನ್ನು ನೇಮಕ ಮಾಡಬೇಕು’ ಎಂದು ಹೇಳಿದರು.

‘ಆರೋಗ್ಯ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಿಂದ ಆಸ್ಪತ್ರೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ವಿಶೇಷ ಅನುದಾನದಡಿಯಲ್ಲಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರಗಳಿಗೆ ವೈದ್ಯಕೀಯ ಸಲಕರಣೆಗಳನ್ನು ಒದಗಿಸಲಾಗುವುದು’ ಎಂದು ತಿಳಿಸಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾನವಿ ಶಾಸಕ ಹಂಪಯ್ಯ ನಾಯಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಟಿ.ಕೆ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ನವೀನ್ ಭಟ್ ವೈ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರಬಾಬು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ನಂದಿತಾ, ತಾಲ್ಲೂಕು ವೈದ್ಯಾಧಿಕಾರಿ ಡಾ .ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವಿಜಯ ಶಂಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಯಶೋಧ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT