ಸೋಮವಾರ, ಆಗಸ್ಟ್ 2, 2021
25 °C

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವಿಫಲ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ನಿಯಂತ್ರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸದ ಕಾರಣ ಸೋಂಕು ತಡೆಗೆ ವಿಫಲವಾಗಿವೆ. ಕೊರೊನಾ ಹೆಸರಿನಲ್ಲಿ ಹಲವು ಕಾಯ್ದೆಗಳನ್ನು ತಿದ್ದುಪಡಿ ಮಾಡುತ್ತಿದ್ದು ಸರ್ಕಾರದ ನೀತಿಗಳ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಧ್ಯಕ್ಷ ಬಿ.ವಿ.ನಾಯಕ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ಪ್ರಮಾಣದಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ. ಪದೇ ಪದೇ ಸರ್ಕಾರ ಮಾರ್ಗಸೂಚಿ ಬದಲಾವಣೆ ಮಾಡಿದ್ದರಿಂದ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ  ತುರ್ತುಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ಸರ್ಕಾರವು  ರೈತರು, ಕಾರ್ಮಿಕರ ವಿರೋಧಿ ಕಾನೂನು ಜಾರಿಗೊಳಿಸಲು ಮುಂದಾಗಿದ್ದು ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿದೆ. ಭೂ ಸ್ವಾಧೀನ ಕಾಯ್ದೆ ಜಾರಿ ಮಾಡುವ ಮೂಲಕ ಕೃಷಿ ಬಿಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ಮೂಲಕ ರೈತರು, ವರ್ತಕರನ್ನು ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಮುಂದಾಗಿದೆ. ಹಲವಾರು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದು ಕೊರೊನಾ ಹೆಸರಿನಲ್ಲಿ ವ್ಯವಸ್ಥೆ ಹಾಳು ಮಾಡಲು ಹೊರಟಿದೆ ಎಂದು ದೂರಿದರು.

ಮುಖಂಡ ಬಾದರ್ಲಿ ಹಂಪನಗೌಡ ಮಾತನಾಡಿ, ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಕೇವಲ ಲಾಕ್ ಡೌನ್ ಜಾರಿ ಮಾಡಿದರೆ ಸಾಲದು, ರೋಗಿಗಳಿಗೆ ಅಗತ್ಯವಾದ ವೆಂಟಿಲೇಟರ್, ವೈದ್ಯರಿಗೆ ,ಸಿಬ್ಬಂದಿ ನೇಮಕ ಮಾಡಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು. ಸರ್ಕಾರ ಆರಂಭದಲ್ಲಿ ಮಾಡಿದ ಎಡವಟ್ಟಿನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎ. ವಸಂತ ಕುಮಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಸವರಾಜ, ಆಂಜನೇಯ, ಜಿ.ಶಿವಮೂರ್ತಿ, ಜಯಣ್ಣ, ಕೆ.ಶಾಂತಪ್ಪ, ತಾಯಣ್ಣ ನಾಯಕ, ರುದ್ರಪ್ಪ ಅಂಗಡಿ, ಅರುಣ ಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.