ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಯೋಜನೆ ಜನರಿಗೆ ತಲುಪಿಸಿ: ಸಚಿವ ವೆಂಕಟರಾವ್ ನಾಡಗೌಡ

ಪೋಷಣಾ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮ
Last Updated 28 ಸೆಪ್ಟೆಂಬರ್ 2018, 11:11 IST
ಅಕ್ಷರ ಗಾತ್ರ

ರಾಯಚೂರು:‘ಸರ್ಕಾರದ ಯೋಜನೆಗಳು ಜನರಿಗೆ ತಲುಪಿಲ್ಲ ಎಂಬ ಕೂಗಿದ್ದು, ಯೋಜನೆಯ ಲಾಭ ಯಾರಿಗೆ ದೊರೆಯಬೇಕೋ ಅವರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು’ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಪೋಷಣಾ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಹೇಳುತ್ತಿದ್ದರೂ ಸಮಾಜದಲ್ಲಿನ ಅದೆಷ್ಟೋ ಜನರಿಗೆ ಇನ್ನೂ ಯೋಜನೆಗಳ ಪರಿಚಯವೇ ಇಲ್ಲವಾಗಿದ್ದು, ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಜಾರಿಗೊಳಿಸಿದ ಸೌಲಭ್ಯಗಳನ್ನು ಒದಗಿಸದಿದ್ದರೆ ತಾಯಂದಿರ ಶಾಪ ತಟ್ಟಲಿದ್ದು, ಪ್ರಾಮಾಣಿಕವಾಗಿ ಯೋಜನೆಗಳನ್ನು ತಲುಪಿಸಿದರೆ ತಾಯಂದಿರ ಹಾರೈಕೆಯಿಂದ ಅಂಗನವಾಡಿ ಸಿಬ್ಬಂದಿಗೆ ಒಳ್ಳೆಯದಾಗಲಿದೆ. ಅಧಿಕಾರಿಗಳು ಕೂಡ ವೇತನಕ್ಕಾಗಿ ಕೆಲಸ ಮಾಡದೇ ಆತ್ಮತೃಪ್ತಿ ಸಿಗುವ ಕಾರ್ಯಗಳನ್ನು ಮಾಡಬೇಕು. ಇಲ್ಲದಿದ್ದರೆ ಜೀವನದಲ್ಲಿ ನೆಮ್ಮದಿ ಇರುವುದಿಲ್ಲ ಎಂದು ತಿಳಿಸಿದರು.

ಗರ್ಭಿಣಿ ನೌಕರರಿಗೆ ವೇತನ ಸಹಿತವಾಗಿ ರಜೆ ನೀಡಲಾಗುತ್ತಿದ್ದು, ಬಡ ಗರ್ಭಿಣಿಯರು ಕೆಲಸಕ್ಕೆ ಹೋದರೆ ತೊಂದರೆಯಾಗಲಿದ್ದು, ಮನೆಯಲ್ಲಿದ್ದರೆ ಆರ್ಥಿಕ ಸಂಕಷ್ಟವಾಗಲಿದೆ ಎಂಬ ಕಾರಣಕ್ಕೆ ಸಹಾಯಧನ ನೀಡಲಾಗುತ್ತಿದೆ ಎಂದರು.

ನರೇಗಾ ಯೋಜನೆಯಡಿ 350 ಅಂಗನವಾಡಿ ಕಟ್ಟಡಗಳನ್ನು ತೆಗೆದುಕೊಳ್ಳಲಾಗಿದ್ದು, ಇದೇ ಯೋಜನೆಯಡಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗುತ್ತಿದೆ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ಬಹಳಷ್ಟು ಗರ್ಭಿಣಿಯರಲ್ಲಿ ರಕ್ತದ ಕೊರತೆ ಇರುತ್ತದೆ. ರಕ್ತ ಕೊರತೆಯಿಂದ ಹುಟ್ಟಿದ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸಬಲರಾಗಿರುವುದಿಲ್ಲ. ಸರ್ಕಾರ ಜಾರಿಗೊಳಿಸಿರುವ ಈ ಯೋಜನೆ ಪ್ರತಿಯೊಂದು ಕುಟುಂಬಕ್ಕೆ ತಲುಪಿಸುವುದರಿಂದ 15 ವರ್ಷಗಳಲ್ಲಿ ಭಾರತ ಬಲಿಷ್ಠವಾಗಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜ, ಆರೋಗ್ಯ ಇಲಾಖೆಯ ಡಾ.ನಾಗರಾಜ, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT