ಸೋಮವಾರ, ಸೆಪ್ಟೆಂಬರ್ 20, 2021
27 °C
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸೀಫ್‌ ಹೇಳಿಕೆ

ದೇಶದ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸ್ವಾತಂತ್ರ್ಯ ಅಮೃತ ಮಹೋತ್ಸವವು ಕೇವಲ ಸಂಭ್ರಮಾಚಾರಣೆ ಅಲ್ಲ, ವೈಭವೀಕರಣವೂ ಅಲ್ಲ, ದೇಶದ ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾರಾಗೃಹ ಹಾಗೂ ರಾಗರಂಜನಿ ಕಲಾಬಳಗದಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ದೇಶ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬ್ರಿಟೀಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡಲು ಪಾದಯಾತ್ರೆ ಮೂಲಕ ಗಾಂಧೀಜಿ ಜನರನ್ನು ಎಚ್ಚರಿಸುತ್ತಿದ್ದರು. ಕ್ರಾಂತಿಕಾರಿ ಹೋರಾಟಗಾರರು ಯುವಕರಲ್ಲಿ ಹೋರಾಟದ ಕಿಚ್ಚು ಹಚ್ಚಿ ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಯುವಕರನ್ನು ಪ್ರೇರೇಪಿಸುತ್ತಿದ್ದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದಾಗಿ ಬ್ರಿಟೀಷರ ಆಳ್ವಿಕೆಯಿಂದ ಭಾರತಕ್ಕೆ ಮುಕ್ತಿ ದೊರೆಯಿತು. ಇಂದು ನಾವೆಲ್ಲರೂ ಶಾಂತಿಯಿಂದಿರಲೂ ಸ್ವಾತಂತ್ರ ಹೋರಾಟಗಾರ ಶ್ರಮವೇ ಕಾರಣ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಅವರು ಮಾತನಾಡಿ, ಕೇಂದ್ರ ಸರ್ಕಾರದ ಆದೇಶದ ಮೇರಿಗೆ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಡಿ.ಪಂಪಣ್ಣ ಮಾತನಾಡಿ, ಜಿಲ್ಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡದಂತೆ ಅಂದು ರಾಜ ಆಜ್ಞೆ ಮಾಡಿದ್ದರು. ರಾಜರ ಆಜ್ಞೆಯನ್ನು ಮೀರಿ ರಾಯಚೂರು ನಗರದ ಪ್ರಮುಖ ಬೀದಿಗಳಲ್ಲಿ ಜಯಂತಿ ಮೆರವಣಿಗೆ ಮಾಡಲಾಗಿತ್ತು ಎಂದು ಹಿಂದಿನ ಘಟನೆಯನ್ನು ಮೆಲುಕು ಹಾಕಿದರು.

ಸ್ವಾತಂತ್ರ್ಯ ಹೋರಾಟಗಾರ ಅಮರೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಅಮ್ರಿತ್, ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಕಾರಾಗೃಹ ಹಾಗೂ ಸುಧಾರಣೆ ಸೇವಾ ಅಧೀಕ್ಷಕ ಬಿ.ಆರ್.ಅಂದಾನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.