ರಾಯಚೂರು: ಭಾರತೀಯ ಸ್ವಾತಂತ್ರ‍್ಯ ಹೋರಾಟದಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಐತಿಹಾಸಿಕ ಹೋರಾಟವಾಗಿದೆ ಎಂದು ಸ್ವಾತಂತ್ರ‍್ಯ ಹೋರಾಟಗಾರ ಡಿ.ಪಂಪಣ್ಣ ಅಭಿಪ್ರಾಯಪಟ್ಟರು.
ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಅಸ್ಕಿಹಾಳ್‌ದ ಗುರುಪುಟ್ಟ ಕಲಾ ಬಳಗದಿಂದ ಸೋಮವಾರ ಏರ್ಪಡಿಸಿದ್ದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸ್ವಾತಂತ್ರ‍್ಯ ಹೋರಾಟದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಿದ್ದೇವು. ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದಾಗ ನಮ್ಮ ಅಜ್ಜಿ ಹೇಳುತ್ತಿದ್ದ ಮಹಾತ್ಮಗಾಂಧಿ ಅವರ ಹೋರಾಟದ ಸ್ಫೂರ್ತಿದಾಯಕ ಮಾತುಗಳಿಂದ ನಾವು ಸ್ವಾತಂತ್ರ‍್ಯ ಹೋರಾಟಕ್ಕೆ ದುಮುಕಿದ್ದೇವು’ ಎಂದರು.
‘ಮಟಮಾರಿ ಪರ್ವತಯ್ಯ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದೇವು. ಗಾಂಧೀಜಿ ಅವರ ಮಾರ್ಗದರ್ಶನದಲ್ಲಿ ನಮ್ಮ ಹೋರಾಟದ ರೂಪುರೇಷೆಗಳನ್ನು ನಿರ್ಮಿಸುವುದರಲ್ಲಿ ಹೆಜ್ಜೆ ಇಟ್ಟಿದ್ದೇವು. ಹಂತ ಹಂತವಾಗಿ ಸ್ವಾತಂತ್ರ‍್ಯ ಹೋರಾಟದಲ್ಲಿ ಪಾಲ್ಗೊಂಡು ಹಲವು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದೇನೆ’ ಎಂದು ನೆನಪಿಸಿಕೊಂಡರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಕಾರ್ಯಕ್ರಮ ಪ್ರಯುಕ್ತ ಗುರುಪುಟ್ಟ ಕಲಾಬಳಗದಿಂದ ಸಂಗೀತ ಕಾರ್ಯಕ್ರಮ ನಡೆಸಲಾಯಿತು.
ರಾಯಚೂರು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ರಾಯಚೂರು ತಹಶಿಲ್ದಾರ್ ಡಾ.ಹಂಪಣ್ಣ ಸಜ್ಜನ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯಕ್, ಸಾಹಿತಿಗಳಾದ ಅಯ್ಯಪ್ಪಯ್ಯ ಹುಡಾ, ವೀರಾ ಹನುಮಾನ್ ಮತ್ತಿತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.