ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗದಿತ ಅವಧಿಗೆ ಕಾಮಗಾರಿ ಪೂರ್ಣಗೊಳಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಸೂಚನೆ
Last Updated 20 ಡಿಸೆಂಬರ್ 2019, 14:51 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕುಮಾರ ನಾಯಕ ಅವರು ದೇವದುರ್ಗ ತಾಲ್ಲೂಕಿನಲ್ಲಿ ಪ್ರಗತಿಯಲ್ಲಿರುವ ವಿವಿಧ ಕಟ್ಟಡ ಕಾಮಗಾರಿಗಳು ಹಾಗೂ ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಕೈಗೊಂಡಿರುವ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲಿಸಿದರು.

ಮೊದಲು ಗಬ್ಬೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಿಗದಿತ ಅವಧಿಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆನಂತರ ದೇವದುರ್ಗ ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಉಂಟಾದ ನೆರೆಹಾವಳಿಯಿಂದ ಮುಳುಗಡೆಯಾದ ಹೂವಿನ ಹಡಗಿ ಸೇತುವೆಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಅಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

‘ಪ್ರವಾಹ ಸಂತ್ರಸ್ತರಿಗೆ ಸೌಲಭ್ಯ ಒದಗಿಸಲಾಗಿದೆ. ಸಂಪೂರ್ಣ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹1 ಲಕ್ಷ ನೇರವಾಗಿ ಅವರ ಖಾತೆಗೆ ಬಿಡುಗಡೆ ಮಾಡಲಾಗಿದೆ. ಕಟ್ಟಡ ನಿರ್ಮಾಣದ ಪ್ರಗತಿ ಆಧಾರದ ಮೇಲೆ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು. ಅಪೂರ್ಣ ಮನೆಗಳಿಗೆ ಪರಿಹಾರವನ್ನು ವಿತರಿಸಲಾಗಿದೆ. ಅದೇರೀತಿ ಬೆಳೆ ಪರಿಹಾರ ನೀಡುವ ಕಾರ್ಯ ನಡೆಯುತ್ತಿದ್ದು, ಸಂಬಂಧಿಸಿದ ರೈತರ ಮಾಹಿತಿಯನ್ನು ಕ್ರೋಢಿಕರಿಸಿ ಪರಿಹಾರ ವಿತರಿಸುವ ಕಾರ್ಯ ನಡೆಯುತ್ತಿದೆ ಎಂದರು.

ಆನಂತರ ಲಿಂಗದಳ್ಳಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಸಂಘದ ಸಭೆಯಲ್ಲಿ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ನೆರೆ ಹಾವಳಿಯಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳನ್ನು ಪುನರ್‌ನಿರ್ಮಿಸುವ ಕುರಿತು ಮಾಹಿತಿ ಪಡೆದು, ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಐಎಎಸ್ ಪ್ರೋಬೆಷನರಿ ಅಧಿಕಾರಿ ಯತೀಶ್ ಕುಮಾರ್, ದೇವದುರ್ಗ ತಹಸೀಲ್ದಾರ್ ಮಂಜುನಾಥ ಭೋಗಾವತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಬ್ರಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT