ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇಗರಕಲ್: ಸೌಕರ್ಯ ಮರೀಚಿಕೆ

ಗುಣಮಟ್ಟದ ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಆರಂಭಕ್ಕೆ ಒತ್ತಾಯ
Last Updated 24 ಡಿಸೆಂಬರ್ 2019, 14:00 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ತಾಲ್ಲೂಕಿನ ಜೇಗರಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ತಿಮ್ಮಾಪುರ ಗ್ರಾಮದಲ್ಲಿ ಸೌಲಭ್ಯಗಳಿಗಿಂದ ಸಮಸ್ಯೆಗಳೇ ಹೆಚ್ಚಾಗಿವೆ.

ಗ್ರಾಮದಲ್ಲಿ 300 ಕುಟುಂಬಗಳಿದ್ದು, 2 ಸಾವಿರ ಜನಸಂಖ್ಯೆ ಇದೆ. ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರು ಇದ್ದಾರೆ. ಆದರೆ ಮೂಲಸೌಕರ್ಯಗಳು ಮಾತ್ರ ಮರೀಚಿಕೆಯಾಗಿವೆ.

2002–03ನೇ ಸಾಲಿನ ಗ್ರಾಮೀಣ ನೀರು ಸರಬರಾಜು ಯೋಜನೆಯ ಹೆಚ್ಚುವರಿ ಅನುದಾನದಲ್ಲಿ ಜಿ.ತಿಮ್ಮಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಆದರೆ, ಘಟಕ ನಿರ್ಮಿಸಿ 15 ವರ್ಷ ಕಳೆದರೂ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕವು ನಿರ್ವಹಣೆ ಕೊರತೆ ಮತ್ತು ತಾಂತ್ರಿಕ ಸಮಸ್ಯೆಗಳಿಂದ ಇದ್ದೂ ಇಲ್ಲದಂತಾಗಿದೆ. ಅದನ್ನು ದುರಸ್ತಿ ಮಾಡಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಗ್ರಾಮದ ಮಲ್ಲೇಶ, ಗಯಬ್ ಒತ್ತಾಯಿಸಿದರು.

ಗ್ರಾಮದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ವಾಹನ ಸವಾರರು ಪರದಾಡಬೇಕಿದ್ದು, ಹಿಡಿಶಾಪ ಹಾಕುತ್ತ ಸಾಗುವ ದೃಶ್ಯಗಳು ಸಾಮಾನ್ಯವಾಗಿವೆ.

ಸಮರ್ಪಕವಾಗಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಇದೆ.

ಸ್ವಚ್ಛತೆ ಕೊರತೆಯಿಂದ ಸೊಳ್ಳೆ, ನೊಣಗಳ ಉತ್ಪತ್ತಿ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಗ್ರಾಮಸ್ಥರಲ್ಲಿ ಆವರಿಸಿದೆ. ಮನೆಗಳಿಂದ ಹರಿದು ಬರುವ ಕೊಳಚೆ ನೀರು ರಸ್ತೆಯಲ್ಲಿ ಸಂಗ್ರಹವಾಗುತ್ತಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಈ ಬಗ್ಗೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಸ್ವಚ್ಛತೆ ದೃಷ್ಟಿಯಿಂದ ಗ್ರಾಮದಲ್ಲಿ ಚರಂಡಿ ನಿರ್ಮಿಸಬೇಕು. ಗ್ರಾಮದ ಪ್ರತಿಯೊಂದು ಓಣಿಯಲ್ಲಿಯೂ ಫಾಗಿಂಗ್ ಮಾಡುವ ಮೂಲಕ ಸೊಳ್ಳೆಗಳ ಹಾವಳಿ ತಡೆಯಬೇಕು ಎನ್ನುತ್ತಾರೆ ಗ್ರಾಮಸ್ಥ ಖಾಜಾಬಾಷ.

ಜಿ.ತಿಮ್ಮಾಪುರ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ₹ 9 ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸದ್ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೇಗರಕಲ್ ಗ್ರಾಮ ಪಂಚಾಯಿತಿ ಪಿಡಿಒ ನಾಗೇಂದ್ರ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT